ಎಂಆರ್‌ಪಿಎಲ್ ಘಟಕದ ಅವಘಡ ಸಂಪೂರ್ಣ ನಿಯಂತ್ರಣದಲ್ಲಿದೆ: ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ, ವದಂತಿಗಳಿಗೆ ಕಿವಿಗೊಡಬೇಡಿ – ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ

ಮಂಗಳೂರು: ಮಂಗಳೂರು ತಾಲೂಕಿನ ಕುತ್ತೆತ್ತೂರಿನಲ್ಲಿರುವ ಎಂಆರ್‌ಪಿಎಲ್ (MRPL) ತೈಲ ಸಂಸ್ಕರಣಾ ಘಟಕದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ತಾಂತ್ರಿಕ ಅವಘಡ ಹಾಗೂ ಭಾರೀ ಶಬ್ದದ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಸಮೀಪದ ನಿವಾಸಿಗಳು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ; ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದು ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸಾರ್ವಜನಿಕರು ಶಾಂತಿ ಮತ್ತು ಸಂಯಮ ಕಾಪಾಡಿಕೊಳ್ಳುವಂತೆ ವಿನಂತಿಸಿದ್ದಾರೆ.

ತ್ವರಿತ ಕಾರ್ಯಾಚರಣೆ – ಪರಿಸ್ಥಿತಿ ತಹಬಂದಿಗೆ:

“ಘಟನೆ ನಡೆದ ತಕ್ಷಣವೇ ಎಂಆರ್‌ಪಿಎಲ್‌ನ ತುರ್ತು ನಿರ್ವಹಣಾ ತಂಡ (Emergency Response Team), ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಜಂಟಿಯಾಗಿ ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ತಹಬಂದಿಗೆ ತಂದಿವೆ. ಸ್ಥಳದಲ್ಲಿ ಮುನ್ನೆಚ್ಚರಿಕೆಯಾಗಿ ಅಗತ್ಯವಿರುವ ಎಲ್ಲಾ ಸುರಕ್ಷತಾ ಹಾಗೂ ರಕ್ಷಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ” ಎಂದು ಶಾಸಕರು ಮಾಹಿತಿ ನೀಡಿದ್ದಾರೆ.

ಭೀತಿ ಬೇಡ, ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ:

“ಭಾರೀ ಶಬ್ದ ಕೇಳಿಬಂದ ಕಾರಣದಿಂದಾಗಿ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಮತ್ತು ಭಯದ ವಾತಾವರಣ ಉಂಟಾಗಿರುವುದು ಸಹಜ. ಆದರೆ ಪ್ರಸ್ತುತ ಯಾವುದೇ ಪ್ರಾಣಾಪಾಯವಾಗಲಿ ಅಥವಾ ಹೆಚ್ಚಿನ ಅಪಾಯದ ಸನ್ನಿವೇಶವಾಗಲಿ ಇಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಘಟನೆ ಕುರಿತು ಹರಿದಾಡುತ್ತಿರುವ ಯಾವುದೇ ರೀತಿಯ ಊಹಾಪೋಹಗಳು ಮತ್ತು ಆಧಾರರಹಿತ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪರಿಸ್ಥಿತಿಯ ಮೇಲೆ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ನಿರಂತರ ನಿಗಾ ವಹಿಸಿದ್ದು, ಸಾರ್ವಜನಿಕರು ಯಾವುದೇ ಗೊಂದಲಕ್ಕೆ ಒಳಗಾಗದೆ ಧೈರ್ಯ ಹಾಗೂ ಶಾಂತಿಯಿಂದ ಇರಬೇಕಾಗಿ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ ಮಾಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!