ಮಂಗಳೂರು: ಸಂತಕವಿ ಕನಕದಾಸರ ಆಧ್ಯಾತ್ಮಿಕ ಹಾಗೂ ಭಕ್ತಿ ಚಿಂತನೆಗಳನ್ನು ಕೊಂಕಣಿ ಭಾಷಿಕರಿಗೆ ತಲುಪಿಸುವ ಉದ್ದೇಶದಿಂದ ವಿಶ್ವ ಕೊಂಕಣಿ ಕೇಂದ್ರದಲ್ಲಿ ಅ.3 ಮತ್ತು 4ರಂದು ‘ಕನಕದಾಸರ ಸಾಹಿತ್ಯ ಕೊಂಕಣಿಯಲ್ಲಿ’ ಎಂಬ ಎರಡು ದಿನಗಳ ವಿಚಾರ ಸಂಕಿರಣ ಹಾಗೂ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಕೇಂದ್ರದ ಅಧ್ಯಕ್ಷ ಸಿ.ಎ. ನಂದಗೋಪಾಲ ಶೆಣೈ ತಿಳಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರದ ಕನಕದಾಸರ ಸಮಗ್ರ ಸಾಹಿತ್ಯವನ್ನು 14 ಭಾಷೆಗಳಿಗೆ ಅನುವಾದಿಸುವ ಯೋಜನೆಯಡಿ ಕೊಂಕಣಿಯಲ್ಲಿ ಪ್ರಕಟಗೊಂಡಿರುವ ಮೂರು ಸಂಪುಟಗಳನ್ನು ಮನೆ, ಮಂದಿರ ಹಾಗೂ ದೇವಸ್ಥಾನಗಳಲ್ಲಿ ಹಾಡುವ ಮೂಲಕ ಜನರಿಗೆ ತಲುಪಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಅ.3ರಂದು ಬೆಳಿಗ್ಗೆ 10ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಡಾ. ಪ್ರಧಾನ ಗುರುದತ್ತ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಯೂನಿವರ್ಸಿಟಿ ಕಾಲೇಜು ಹಂಪನಕಟ್ಟೆಯ ಪ್ರಾಂಶುಪಾಲ ಡಾ. ಜಯವಂತ ನಾಯಕ್ ಅವರು ಮೂರು ಸಂಪುಟಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಸಂಜೆ ಕನಕದಾಸರ ಕೀರ್ತನೆಗಳ ಕುಣಿತ ಭಜನೆ ಹಾಗೂ ‘ಶ್ರೀನಿವಾಸ ಕಲ್ಯಾಣ’ ಕೊಂಕಣಿ ಗೀತ ನಾಟಕ ಪ್ರದರ್ಶನಗೊಳ್ಳಲಿದೆ.
ಎರಡು ದಿನಗಳ ಕಾರ್ಯಕ್ರಮದಲ್ಲಿ ಕನಕದಾಸರ ಸಾಹಿತ್ಯವನ್ನು ಕೊಂಕಣಿಗೆ ಅನುವಾದಿಸಿದ ತಜ್ಞರು ಸಂಶೋಧನಾತ್ಮಕ ಪ್ರಬಂಧ ಮಂಡಿಸಲಿದ್ದು, ಕೊಂಕಣಿ ಸಂಗೀತಗಾರರು ಕನಕದಾಸರ ಅನುವಾದಿತ ಕೀರ್ತನೆಗಳನ್ನು ಪ್ರಸ್ತುತಪಡಿಸಲಿದ್ದಾರೆ. ಸಾರ್ವಜನಿಕರು ಹಾಗೂ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಂದಗೋಪಾಲ ಶೆಣೈ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ರಮೇಶ್ ನಾಯಕ್, ಬಿ.ಎಸ್. ಭಟ್, ಎಂ.ಆರ್. ಕಾಮತ್, ಗೋವಿಂದರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

