2026ನೇ ಸಾಲಿನ ‘ಕಾರಂತ ಪ್ರಶಸ್ತಿ’ಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ

ಮಂಗಳೂರು, ಅ.1: ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ ‘ಕಾರಂತ ಪ್ರಶಸ್ತಿ’ಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆಯಾಗಿದ್ದಾರೆ.


ಕಾರಂತ ಪ್ರಶಸ್ತಿ ಸಮಿತಿ ಅಧ್ಯಕ್ಷ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಸ್. ಪ್ರದೀಪ ಕುಮಾರ್ ಕಲ್ಕೂರ ಅವರು ಈ ವಿಷಯವನ್ನು ತಿಳಿಸಿದ್ದಾರೆ. ಅ.10ರಂದು ಬೆಳಗ್ಗೆ 10ಕ್ಕೆ ಮಂಗಳೂರಿನ ಕೊಡಿಯಾಲ್‌ಬೈಲ್‌ನ ಪತ್ತುಮುಡಿ ಸೌಧದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.


‘ವೈದೇಹಿ’ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ಜಾನಕಿ ಶ್ರೀನಿವಾಸಮೂರ್ತಿ ಅವರು ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರದವರು. ಕಥೆ, ಕವನ, ಕಾದಂಬರಿ, ಪ್ರಬಂಧ, ಮಕ್ಕಳ ಸಾಹಿತ್ಯ ಹಾಗೂ ಅನುವಾದ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆ ನೀಡಿರುವ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಎಂ.ಕೆ. ಇಂದಿರಾ ಪ್ರಶಸ್ತಿ, ಅನುಪಮಾ ಪ್ರಶಸ್ತಿ ಮತ್ತು ಅತ್ತಿಮಬ್ಬೆ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಭಾಜನರಾಗಿದ್ದಾರೆ.
ವೈದೇಹಿ ಅವರ ‘ಅಸ್ಪಶ್ಯರು’ ಕಾದಂಬರಿ ಮಂಗಳೂರು ವಿಶ್ವವಿದ್ಯಾಲಯದ ಪದವಿ ತರಗತಿಗಳಿಗೆ ಹಾಗೂ ಹಲವು ಸಣ್ಣಕಥೆಗಳು ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯವಾಗಿವೆ. ಅವರ ಕೃತಿಗಳು ಹಿಂದಿ, ಮಲಯಾಳಂ, ತಮಿಳು, ತೆಲುಗು ಹಾಗೂ ಗುಜರಾತಿ ಸೇರಿದಂತೆ ಹಲವು ಭಾಷೆಗಳಿಗೆ ಅನುವಾದಗೊಂಡಿವೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!