ಪಶ್ಚಿಮ ಘಟ್ಟ ಸಂರಕ್ಷಣೆಗೆ ಕರ್ನಾಟಕ ಸರ್ಕಾರದ ನಿರ್ಲಕ್ಷ್ಯ: ಬೆನೆಡಿಕ್ಟ್ ಸಿ. ಫೆರ್ನಾಂಡೀಸ್ ಆರೋಪ

ಮಂಗಳೂರು: ಜಾಗತಿಕ ಪರಿಸರ ಸಮತೋಲನದಲ್ಲಿ ಮಹತ್ವದ ಪಾತ್ರ ವಹಿಸುವ ಪಶ್ಚಿಮ ಘಟ್ಟಗಳ ಸಂರಕ್ಷಣೆಯ ವಿಚಾರದಲ್ಲಿ ಕರ್ನಾಟಕ ಸರ್ಕಾರ ಸೂಕ್ತ ನಿಲುವು ತೆಗೆದುಕೊಳ್ಳುತ್ತಿಲ್ಲ. ಗಣಿಗಾರಿಕೆ ಉದ್ಯಮಗಳ ಹಿತಾಸಕ್ತಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಹಾಗೂ ಕಸ್ತೂರಿರಂಗನ್ ವರದಿಯನ್ನು ಕಡೆಗಣಿಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಂಘದ ಕಾರ್ಯದರ್ಶಿ ಬೆನೆಡಿಕ್ಟ್ ಸಿ. ಫೆರ್ನಾಂಡೀಸ್ ಆರೋಪಿಸಿದರು.

ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಘಟ್ಟಗಳು ಕೇವಲ ಸ್ಥಳೀಯ ಜನರಿಗೆ ಮಾತ್ರವಲ್ಲದೆ ಇಡೀ ಜಗತ್ತಿನ ಪರಿಸರ ಸಮತೋಲನಕ್ಕೆ ಅತ್ಯಂತ ಮಹತ್ವದ್ದಾಗಿವೆ. ಯುನೆಸ್ಕೋ ಪಶ್ಚಿಮ ಘಟ್ಟಗಳನ್ನು ವಿಶ್ವ ಪಾರಂಪರಿಕ ತಾಣವೆಂದು ಗುರುತಿಸಿದೆ. ಇಂತಹ ಮಹತ್ವದ ಪರಿಸರ ಪ್ರದೇಶವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಸರ್ಕಾರಗಳು ಗಂಭೀರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಗುರುತಿಸುವ ಸಂಬಂಧ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು 2013ರಲ್ಲಿ ಕರಡು ಅಧಿಸೂಚನೆ ಹೊರಡಿಸಿ, ಆರು ರಾಜ್ಯಗಳ ಸುಮಾರು 59,943 ಚದರ ಕಿಲೋಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸುವ ಪ್ರಸ್ತಾವನೆ ಮುಂದಿಟ್ಟಿತ್ತು. ಈ ಕುರಿತು ರಾಜ್ಯಗಳಿಂದ ಅಭಿಪ್ರಾಯಗಳನ್ನು ಆಹ್ವಾನಿಸಲಾಗಿತ್ತು. ಕೇರಳ ಸರ್ಕಾರ ಸಮಿತಿ ರಚಿಸಿ, ಸ್ಥಳ ಪರಿಶೀಲನೆಯ ಆಧಾರದಲ್ಲಿ ಸುಮಾರು 9,993 ಚದರ ಕಿಲೋಮೀಟರ್ ಪ್ರದೇಶವನ್ನು ಪ್ರಸ್ತಾವಿತ ಪರಿಸರ ಸೂಕ್ಷ್ಮ ವಲಯದಿಂದ ಹೊರಗಿಡುವಂತೆ ಶಿಫಾರಸು ಮಾಡಿತ್ತು ಎಂದು ತಿಳಿಸಿದರು.

ಕರ್ನಾಟಕ ಸರ್ಕಾರವೂ ಇದೇ ಮಾದರಿಯಲ್ಲಿ ಅಧ್ಯಯನ ನಡೆಸಲು ಉನ್ನತ ಮಟ್ಟದ ರಾಜ್ಯ ತಜ್ಞರ ಸಮಿತಿ ರಚಿಸಿತ್ತು. ಈ ಸಮಿತಿಯು 2015ರ ಅಕ್ಟೋಬರ್ 31ರಂದು ವರದಿ ಸಲ್ಲಿಸಿತ್ತು. ಕೇರಳದ ಮಾದರಿಯಲ್ಲೇ ಸ್ಥಳ ಪರಿಶೀಲನೆ ನಡೆಸಿ ಸಿದ್ಧಪಡಿಸಿದ್ದ ವರದಿಯಲ್ಲಿ ಕೆಲವು ಪ್ರದೇಶಗಳನ್ನು ಪರಿಸರ ಸೂಕ್ಷ್ಮ ವಲಯದಿಂದ ಹೊರಗಿಡುವ ಕುರಿತು ಶಿಫಾರಸು ಮಾಡಲಾಗಿತ್ತು. ಆದರೆ, ಈ ವರದಿಯನ್ನು ಸಮರ್ಪಕವಾಗಿ ಪರಿಗಣಿಸದೆ ಬದಿಗಿಡಲಾಗಿದೆ ಎಂದು ಆರೋಪಿಸಿದರು.

ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಲವು ಬಾರಿ ಕರಡು ಅಧಿಸೂಚನೆಗಳನ್ನು ಹೊರಡಿಸಿದ್ದರೂ, ರಾಜ್ಯ ಸರ್ಕಾರ ಕಸ್ತೂರಿರಂಗನ್ ವರದಿಯನ್ನು ವಿರೋಧಿಸುತ್ತಲೇ ಬಂದಿದೆ. ಕೇಂದ್ರದ ಕರಡು ಅಧಿಸೂಚನೆಯನ್ನು ತಿರಸ್ಕರಿಸುವ ಮೂಲಕ ಪರಿಸರ ಸಂರಕ್ಷಣೆಯ ಹೊಣೆಗಾರಿಕೆಯಿಂದ ಹಿಂದೆ ಸರಿಯಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅಪಾರ ಖನಿಜ ಸಂಪತ್ತು ಇರುವುದರಿಂದ ಗಣಿಗಾರಿಕೆ ಮತ್ತು ಕಲ್ಲುಗಣಿಗಾರಿಕೆ ಉದ್ಯಮಗಳ ಹಿತಾಸಕ್ತಿಗಳು ಪರಿಸರ ಸಂರಕ್ಷಣೆಯ ನಿರ್ಧಾರಗಳ ಮೇಲೆ ಪ್ರಭಾವ ಬೀರುತ್ತಿವೆ ಎಂಬ ಅನುಮಾನವಿದೆ. ಜನರ ಅಭಿಪ್ರಾಯದ ಹೆಸರಿನಲ್ಲಿ ವರದಿಯನ್ನು ತಿರಸ್ಕರಿಸುವುದಾದರೆ, ಅದಕ್ಕೆ ಆಧಾರವಾದ ದಾಖಲೆಗಳು ಮತ್ತು ವೈಜ್ಞಾನಿಕ ಅಧ್ಯಯನಗಳನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

ಈಗಾಗಲೇ ತಜ್ಞರ ಸಮಿತಿ ವರದಿ ಸಲ್ಲಿಸಿರುವಾಗ ಮತ್ತೊಂದು ಸಮಿತಿ ರಚಿಸುವ ಅಗತ್ಯವೇನು ಎಂಬ ಪ್ರಶ್ನೆಯನ್ನೂ ಅವರು ಎತ್ತಿದರು. ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಇದುವರೆಗೆ ಪರಿಣಾಮಕಾರಿ ಹಾಗೂ ಸಕಾರಾತ್ಮಕ ನಿಲುವು ತೆಗೆದುಕೊಂಡಿಲ್ಲ. ಪರಿಸರ ಸಂರಕ್ಷಣೆಯ ಜೊತೆಗೆ ಸ್ಥಳೀಯ ಜನರ ಹಿತಾಸಕ್ತಿಯನ್ನೂ ಕಾಪಾಡುವ ವೈಜ್ಞಾನಿಕ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಚಾರ್ಲ್ಸ್ ಅನಿಲ್ ಡಿಸೋಜ, ಪ್ರಮುಖರಾದ ಮಹಮ್ಮದ್ ನಿಹಾಲ್ ಹಾಗೂ ಆರತಿ ಅಶೋಕ್ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!