ಸಂತ ಆಗ್ನೆಸ್ ಕಾಲೇಜಿನಲ್ಲಿ ಅ. 19 ಮತ್ತು 22ರ ಪರೀಕ್ಷೆ ಮುಂದೂಡಿಕೆ: ಆಡಳಿತ ಮಂಡಳಿ ಸ್ಪಷ್ಟನೆ

ಮಂಗಳೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ, ಮಂಗಳೂರಿನ ಸಂತ ಆಗ್ನೆಸ್ ಸ್ವಾಯತ್ತ ಕಾಲೇಜು ಅಕ್ಟೋಬರ್ 19 ಮತ್ತು 22ರಂದು ನಿಗದಿಯಾಗಿದ್ದ ಸೆಮಿಸ್ಟರ್ ಅಂತ್ಯ ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ. ಪರಿಷ್ಕೃತ ಪರೀಕ್ಷಾ ದಿನಾಂಕಗಳನ್ನು ಅಧಿಕೃತ ಮಾಧ್ಯಮಗಳ ಮೂಲಕ ಪ್ರಕಟಿಸಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

ಅಕ್ಟೋಬರ್ 2026ರ ಪರೀಕ್ಷಾ ವೇಳಾಪಟ್ಟಿಯನ್ನು ಕಾಲೇಜಿನ ಅನುಮೋದಿತ ಶೈಕ್ಷಣಿಕ ಕ್ಯಾಲೆಂಡರ್‌ಗೆ ಅನುಗುಣವಾಗಿ ಸಿದ್ಧಪಡಿಸಲಾಗಿತ್ತು. ಸೆಪ್ಟೆಂಬರ್ 11ರಂದು ಕರಡು ವೇಳಾಪಟ್ಟಿ ಪ್ರಕಟಿಸಿ, ಆಕ್ಷೇಪಣೆ ಹಾಗೂ ಬದಲಾವಣೆಗಳ ಕುರಿತು ಮನವಿ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿತ್ತು. ವಿದ್ಯಾರ್ಥಿಗಳಿಂದ ಯಾವುದೇ ಆಕ್ಷೇಪಣೆಗಳು ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 26ರಂದು ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿತ್ತು ಎಂದು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.
ಅಕ್ಟೋಬರ್ 12ರಂದು ಕೆಲವು ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ವಿದ್ಯಾರ್ಥಿಗಳ ಕಳವಳಗಳನ್ನು ಪರಿಗಣಿಸಿ ಹಾಗೂ ಕಾಲೇಜಿನಲ್ಲಿ ಸೌಹಾರ್ದಯುತ ಶೈಕ್ಷಣಿಕ ವಾತಾವರಣ ಕಾಪಾಡುವ ಉದ್ದೇಶದಿಂದ ಪರೀಕ್ಷೆಗಳನ್ನು ಮುಂದೂಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ಕಾಲೇಜು ಜಾತ್ಯತೀತತೆ, ಸಮಾನತೆ, ಧಾರ್ಮಿಕ ಸಾಮರಸ್ಯ ಮತ್ತು ಪರಸ್ಪರ ಗೌರವದ ತತ್ವಗಳಿಗೆ ಬದ್ಧವಾಗಿದೆ. ವಿದ್ಯಾರ್ಥಿಗಳ ನ್ಯಾಯಸಮ್ಮತ ಕಳವಳಗಳಿಗೆ ಸಂವಾದದ ಮೂಲಕ ಸ್ಪಂದಿಸಲು ಆಡಳಿತ ಮಂಡಳಿ ಸಿದ್ಧವಿದ್ದು, ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಪಡಿಸುವ ಅಥವಾ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ತರುವ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸಹಕರಿಸಿದ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ಪೊಲೀಸ್ ಸಿಬ್ಬಂದಿ ಹಾಗೂ ಪೋಷಕರ ಸಂಘದ ಸದಸ್ಯರಿಗೆ ಕಾಲೇಜಿನ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸಿದೆ.

SHARE
Loading spinner

One thought on “ಸಂತ ಆಗ್ನೆಸ್ ಕಾಲೇಜಿನಲ್ಲಿ ಅ. 19 ಮತ್ತು 22ರ ಪರೀಕ್ಷೆ ಮುಂದೂಡಿಕೆ: ಆಡಳಿತ ಮಂಡಳಿ ಸ್ಪಷ್ಟನೆ”

Leave a Reply

Your email address will not be published. Required fields are marked *

error: Content is protected !!