ಮಂಗಳೂರು, ಅ.22: ಈಶಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಮನೋಹರ್ ರೈ ವೈಪಾಲ ಅವರ ನಿರ್ಮಾಣದಲ್ಲಿ ಮೂಡಿಬಂದಿರುವ ‘ಬನ’ ತುಳು ಚಲನಚಿತ್ರ ಅಕ್ಟೋಬರ್ 23 ರಂದು ಕರಾವಳಿಯಾದ್ಯಂತ ತೆರೆಕಾಣಲಿದೆ ಎಂದು ಚಿತ್ರದ ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ತಿಳಿಸಿದರು.
ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು, ಸುರತ್ಕಲ್, ಪಡುಬಿದ್ರಿ, ಉಡುಪಿ, ಮಣಿಪಾಲ, ಕಾರ್ಕಳ, ದೇರಳಕಟ್ಟೆ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ಸೇರಿದಂತೆ ವಿವಿಧೆಡೆ ಸಿನಿಮಾ ಬಿಡುಗಡೆಯಾಗಲಿದೆ. ಈಗಾಗಲೇ ನಡೆದ ಪ್ರೀಮಿಯರ್ ಪ್ರದರ್ಶನದಲ್ಲಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಚಿತ್ರತಂಡಕ್ಕೆ ಮತ್ತಷ್ಟು ವಿಶ್ವಾಸ ಮೂಡಿಸಿದೆ ಎಂದರು.

ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಖ್ಯಾತ ಪತ್ರಕರ್ತ ಹಾಗೂ ನಟ ಜಯಪ್ರಕಾಶ್ ಶೆಟ್ಟಿ ಮಾತನಾಡಿ, ತುಳು ಚಿತ್ರರಂಗಕ್ಕೆ ಪ್ರೇಕ್ಷಕರು ಮತ್ತು ಮಾಧ್ಯಮಗಳು ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಮನವಿ ಮಾಡಿದರು. ‘ಬನ’ ಚಿತ್ರದ ಪ್ರೀಮಿಯರ್ ಪ್ರದರ್ಶನ ವೀಕ್ಷಿಸಿದ ಬಳಿಕ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಿನಿಮಾದ ಬಗ್ಗೆ ವಿಶ್ವಾಸ ಹೆಚ್ಚಾಗಿದೆ. ಚಿತ್ರದ ಚಿತ್ರೀಕರಣವನ್ನು ಅಚ್ಚುಕಟ್ಟಾಗಿ ನಡೆಸಲಾಗಿದೆ. ಸಾಮಾನ್ಯವಾಗಿ ಹಲವು ದಿನಗಳ ಕಾಲ ನಡೆಯುವ ಚಿತ್ರೀಕರಣವನ್ನು ಪೂರ್ವಯೋಜನೆ ಹಾಗೂ ನಿರ್ದೇಶಕರ ಬದ್ಧತೆಯಿಂದ ಕೇವಲ 14 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ. ತುಳುನಾಡಿನ ಹುಲಿವೇಷ, ದೈವಾರಾಧನೆ ಹಾಗೂ ಇಲ್ಲಿನ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಚಿತ್ರದಲ್ಲಿ ಪರಿಣಾಮಕಾರಿಯಾಗಿ ತೋರಿಸಲಾಗಿದೆ. ಇಂತಹ ಚಿತ್ರಗಳಿಗೆ ಪ್ರೇಕ್ಷಕರು ಬೆಂಬಲ ನೀಡಬೇಕು ಎಂದು ಹೇಳಿದರು.
ಚಿತ್ರದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತೆ ರೂಪ ವರ್ಕಾಡಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಾಯಕನಾಗಿ ನಿಹಾಲ್ ರೈ ಹಾಗೂ ನಾಯಕಿಯಾಗಿ ಕೃತಿ ಶ್ರೀನಿವಾಸ್ ಪೂಜಾರಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಜಯಪ್ರಕಾಶ್ ಶೆಟ್ಟಿ ಅವರ ಖಡಕ್ ಸಂಭಾಷಣೆಗಳು ಚಿತ್ರದ ಪ್ರಮುಖ ಆಕರ್ಷಣೆಗಳಾಗಿವೆ. ಶರತ್ ಆಳ್ವ, ಪ್ರಿಯಾ ಶೆಟ್ಟಿ, ವಿಜಯಹರಿ ರೈ, ವಿಕಾಸ್ ಪುತ್ರನ್, ನಿಜರೂಪ ಶೆಟ್ಟಿ, ಸವಿತಾ ಅಂಚನ್, ಧನ್ಯ ಪೂಜಾರಿ ಹಾಗೂ ಪ್ರವೀಣ್ ಕೊಡಕ್ಕಲ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ.

ಅರುಣ್ ರೈ ಪುತ್ತೂರು ಅವರ ಛಾಯಾಗ್ರಹಣ, ನವೀನ್ ನೇರಳ್ಕೊಡಿ ಅವರ ಸಂಕಲನ ಹಾಗೂ ಜಯಕಾರ್ತಿ ಅವರ ಸಂಗೀತ ಚಿತ್ರಕ್ಕಿದೆ.
ಸುದ್ದಿಗೋಷ್ಠಿಯಲ್ಲಿ ನಿರ್ಮಾಪಕ ಮನೋಹರ್ ರೈ ವೈಪಾಲ, ಛಾಯಾಗ್ರಾಹಕ ಅರುಣ್ ರೈ ಪುತ್ತೂರು, ನಟಿ ಕೃತಿ ಶ್ರೀನಿವಾಸ್ ಪೂಜಾರಿ, ನಾಯಕ ನಟ ನಿಹಾಲ್ ರೈ, ಸವಿತಾ ಅಂಚನ್ ಸೇರಿದಂತೆ ಚಿತ್ರತಂಡದ ಪ್ರಮುಖರು ಉಪಸ್ಥಿತರಿದ್ದರು.

