ಮಂಗಳೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆಗೆ ಸಂಬಂಧಿಸಿದ ಸ್ಟ್ರಿಂಗ್ ಆಪರೇಷನ್ ಪ್ರಕರಣದ ಸತ್ಯಾಸತ್ಯತೆಯನ್ನು ಬಹಿರಂಗಪಡಿಸುವುದರ ಜತೆಗೆ, ದಕ್ಷಿಣ ಕನ್ನಡ ಜಿಲ್ಲೆಯ ಇತರ ಕ್ಷೇತ್ರಗಳಲ್ಲಿಯೂ ಇಂತಹ ಘಟನೆಗಳು ನಡೆದಿವೆಯೇ ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆಗ್ರಹಿಸಿದ್ದಾರೆ.

ನಗರದ ಪಿವಿಎಸ್ ಬಳಿಯ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಟ್ರಿಂಗ್ ಆಪರೇಷನ್ ಪ್ರಕರಣದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆಸರು ಬಂದಿದೆ. ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ಸತ್ಯವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ನಡೆದಿರುವುದಾಗಿ ಹೇಳಲಾಗುತ್ತಿರುವ ಸ್ಟ್ರಿಂಗ್ ಆಪರೇಷನ್ ಕುರಿತು ಈಗ ಹಲವು ಸಂದೇಶಗಳು ಹರಿದಾಡುತ್ತಿವೆ. ಈ ಪ್ರಕರಣದ ಹಿಂದೆ ಯಾರಿದ್ದಾರೆ? ಟಿಕೆಟ್ ಪಡೆಯುವ ಉದ್ದೇಶದಿಂದಲೇ ಇಂತಹ ಪ್ರಯತ್ನ ನಡೆದಿದೆಯೇ? ಅಥವಾ ಟಿಕೆಟ್ ಪಡೆದವರು ಕೂಡ ಇದರಲ್ಲಿ ಭಾಗಿಯಾಗಿದ್ದಾರೆಯೇ ಎಂಬ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ. ಪುತ್ತೂರಿನಲ್ಲಿನ ಆಂತರಿಕ ಗೊಂದಲಗಳೇ ಬೇರೆ. ಆದರೆ, ಸ್ಟ್ರಿಂಗ್ ಆಪರೇಷನ್ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಯುವುದು ಅಗತ್ಯ ಎಂದು ಅವರು ಹೇಳಿದರು.

2011ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರದ ಸಂದರ್ಭದಲ್ಲಿ ನಡೆದಿರುವುದಾಗಿ ಹೇಳಲಾಗುತ್ತಿರುವ ಈ ಪ್ರಕರಣವನ್ನು 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿಯೂ ರಾಜಕೀಯ ದಾಳವಾಗಿ ಬಳಸಿಕೊಳ್ಳಲಾಗಿದೆಯೇ ಎಂಬ ಬಗ್ಗೆ ತನಿಖೆಯಾಗಬೇಕು. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಿದವರಿಗೆ ಟಿಕೆಟ್ ನೀಡುವ ಸಂದರ್ಭದಲ್ಲಿ ಇಂತಹ ಘಟನೆಗಳು ನಡೆದಿವೆಯೇ? ಟಿಕೆಟ್ ಹಂಚಿಕೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ ಎಂಬುದನ್ನೂ ತನಿಖೆಯ ವ್ಯಾಪ್ತಿಗೆ ತರಬೇಕು ಎಂದು ಸತೀಶ್ ಕುಂಪಲ ಒತ್ತಾಯಿಸಿದರು.

ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರು, ತಮ್ಮ ತಂದೆಯ ಹೆಸರಿಗೆ ಪಕ್ಷದವರೇ ಧಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿರುವುದಾಗಿ ಉಲ್ಲೇಖಿಸಿದ ಅವರು, ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕೆಂಬ ಬೇಡಿಕೆ ವ್ಯಕ್ತವಾಗಿದೆ ಎಂದರು. ಈಗಾಗಲೇ ಕೆಲವರ ಹೆಸರುಗಳು ಪ್ರಸ್ತಾಪವಾಗಿರುವ ಹಿನ್ನೆಲೆಯಲ್ಲಿ, ಕೇವಲ ನಿರ್ದಿಷ್ಟ ವ್ಯಕ್ತಿಗಳ ಮಟ್ಟಕ್ಕೆ ತನಿಖೆಯನ್ನು ಸೀಮಿತಗೊಳಿಸದೆ, ಪ್ರಕರಣದ ಎಲ್ಲ ಆಯಾಮಗಳನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ಕ್ಷೇತ್ರದಲ್ಲಿ ನಡೆದಿರುವುದಾಗಿ ಹೇಳಲಾಗುತ್ತಿರುವ ಈ ಬೆಳವಣಿಗೆಯ ಸತ್ಯಾಸತ್ಯತೆ ಜನರಿಗೆ ತಿಳಿಯಬೇಕು. ಆದಷ್ಟು ಶೀಘ್ರ ತನಿಖೆ ನಡೆಸಿ, ವಾಸ್ತವಾಂಶಗಳನ್ನು ಸಾರ್ವಜನಿಕಗೊಳಿಸಬೇಕು ಎಂದು ಅವರು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಪಕ್ಷದ ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ವಿಕಾಸ್ ಪುತ್ತೂರು, ಪ್ರಸನ್ನ ಮಾರ್ತ, ಶಾಂತಿಪ್ರಸಾದ್ ಹೆಗ್ಡೆ, ರವೀಂದ್ರ ಶೆಟ್ಟಿ ಉಳಿದೊಟ್ಟು, ಕವಿತಾ, ವಸಂತ ಪೂಜಾರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

