ಸೋಮನಾಥ್ ಪುತ್ರನ್ ಆತ್ಮಹತ್ಯೆ ಪ್ರಕರಣ: 48 ಗಂಟೆಗಳ ಗಡುವು, ಮೊಗವೀರ ಸಂಯುಕ್ತ ಸಭಾದಿಂದ ಉಗ್ರ ಹೋರಾಟದ ಎಚ್ಚರಿಕೆ

ಮಂಗಳೂರು: ಸೋಮನಾಥ್ ಪುತ್ರನ್ ಆತ್ಮಹತ್ಯೆ ಪ್ರಕರಣದಲ್ಲಿ ನ್ಯಾಯ ಒದಗಿಸುವಂತೆ ಆಗ್ರಹಿಸಿರುವ ದಕ್ಷಿಣ ಕನ್ನಡ ಮೊಗವೀರ ಸಂಯುಕ್ತ ಸಭಾ, ಸರ್ಕಾರದ ಮುಂದೆ ಹತ್ತು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ. ಈ ಪೈಕಿ ನಾಲ್ಕು ಪ್ರಮುಖ ಬೇಡಿಕೆಗಳನ್ನು 48 ಗಂಟೆಗಳೊಳಗೆ ಈಡೇರಿಸದಿದ್ದರೆ ಕರಾವಳಿಯ ಮೀನುಗಾರ ಸಮುದಾಯದ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಮೊಗವೀರ ಸಂಯುಕ್ತ ಸಭಾದ ಅಧ್ಯಕ್ಷ ಭರತ್ ಕುಮಾರ್ ಉಳ್ಳಾಲ್ ಎಚ್ಚರಿಕೆ ನೀಡಿದರು.

ನಗರದ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸರಿಂದ ಮಾನಸಿಕ ಹಿಂಸೆಗೊಳಗಾಗಿ ಸೋಮನಾಥ್ ಪುತ್ರನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಅಡಿಯಲ್ಲಿ ಪ್ರಕರಣ ದಾಖಲಿಸಿ, ಅವರನ್ನು ತಕ್ಷಣ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.

ಮೃತರ ಪತ್ನಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಿರುವ ದೆಹಲಿ ಮೂಲದ ಕಾಜೋಲ್ ಹಾಗೂ ಕೇರಳ ಮೂಲದ ರಿಯಾಜ್ ಅವರನ್ನು ತಕ್ಷಣ ಬಂಧಿಸಬೇಕು. ಪ್ರಕರಣದ ತನಿಖೆಯನ್ನು ನ್ಯಾಯಾಂಗ ಅಥವಾ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವಹಿಸಿ, 30 ದಿನಗಳೊಳಗೆ ತನಿಖಾ ವರದಿಯನ್ನು ಬಹಿರಂಗಪಡಿಸಬೇಕು. ಅಲ್ಲದೆ, ಸಂಬಂಧಪಟ್ಟ ಪೊಲೀಸ್ ಠಾಣೆಯ ಸಿಸಿಟಿವಿ ದೃಶ್ಯಾವಳಿ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಮೃತರ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ ನೀಡಬೇಕು. ಅವರ ಪತ್ನಿಗೆ ಸರ್ಕಾರಿ ಉದ್ಯೋಗ ಕಲ್ಪಿಸುವುದರ ಜತೆಗೆ ಮಕ್ಕಳ ಶಿಕ್ಷಣದ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಇದಲ್ಲದೆ, ಕರಾವಳಿ ಭಾಗದ ಪೊಲೀಸ್ ಠಾಣೆಗಳಲ್ಲಿ ಮೀನುಗಾರರ ರಕ್ಷಣಾ ಕೋಶ ಸ್ಥಾಪಿಸಬೇಕು. ಮೀನುಗಾರ ಸಮುದಾಯದವರೊಂದಿಗೆ ಗೌರವಯುತವಾಗಿ ವರ್ತಿಸುವ ಕುರಿತು ಪೊಲೀಸ್ ಸಿಬ್ಬಂದಿಗೆ ವಿಶೇಷ ತರಬೇತಿ ನೀಡಬೇಕು ಎಂಬ ಬೇಡಿಕೆಗಳನ್ನೂ ಸರ್ಕಾರದ ಮುಂದಿಟ್ಟರು.

ಸರ್ಕಾರ ತಕ್ಷಣ ಸ್ಪಂದಿಸಿ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಮೀನುಗಾರ ಸಮುದಾಯವನ್ನು ಒಗ್ಗೂಡಿಸಿ ಹೋರಾಟ ನಡೆಸಲಾಗುವುದು ಎಂದು ಭರತ್ ಕುಮಾರ್ ಉಳ್ಳಾಲ್ ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಯ ಸಿ. ಕೋಟ್ಯಾನ್, ಶರಣ್ ಕುಮಾರ್, ಸುಭಾಷ್, ಅರವಿಂದ್ ಬೆಂಗ್ರೆ, ಗಿರೀಶ್ ಕರ್ಕೇರ, ಮೋಹನ್ ಬೆಂಗ್ರೆ, ಯತೀಶ್ ಬೈಕಂಪಾಡಿ ಹಾಗೂ ಲಕ್ಷ್ಮಣ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!