ಎಸ್‌ಐಆರ್‌ನಲ್ಲಿ ಅಕ್ರಮ ನಡೆದಿದ್ದರೆ ದಾಖಲೆ ಸಹಿತ ಸಾಬೀತುಪಡಿಸಿ: ಕಾಂಗ್ರೆಸ್‌ಗೆ ಶಾಸಕ ವೇದವ್ಯಾಸ ಕಾಮತ್ ಸವಾಲು …. !

ಮಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸುವ ಕಾಂಗ್ರೆಸ್ ನಾಯಕರು, ತಮ್ಮ ಆರೋಪಕ್ಕೆ ಪೂರಕವಾದ ದಾಖಲೆಗಳನ್ನು ಬಹಿರಂಗಪಡಿಸಲಿ ಎಂದು ಶಾಸಕ ವೇದವ್ಯಾಸ ಕಾಮತ್ ಸವಾಲು ಹಾಕಿದ್ದಾರೆ.

ನಗರದ ಅಟಲ್ ಸೇವಾ ಕೇಂದ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಎಎಸ್‌ಡಿಡಿ (Absent, Shifted, Dead, Duplicate) ಎಂದು ಗುರುತಿಸಲಾದ 99 ಲಕ್ಷ ಮತದಾರರ ಪೈಕಿ ಕನಿಷ್ಠ 9 ಲಕ್ಷ ಮಂದಿಯನ್ನಾದರೂ ಕರೆತಂದು ಕ್ರಮಬದ್ಧವಾಗಿ ಅರ್ಜಿ ಸಲ್ಲಿಸುವ ಕೆಲಸವನ್ನು ಕಾಂಗ್ರೆಸ್ ಮಾಡಲಿ. ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸುವ ಬದಲು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲಿ ಎಂದು ಹೇಳಿದರು.

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ಸಲ್ಲಿಸಿದ ಬಳಿಕವೂ ಯಾವುದೇ ಜಾತಿ, ಮತ, ಧರ್ಮದ ಒಬ್ಬನೇ ಒಬ್ಬ ಅರ್ಹ ಮತದಾರನ ಹೆಸರನ್ನು ಅಕ್ರಮವಾಗಿ ಮತದಾರರ ಪಟ್ಟಿಯಿಂದ ತೆಗೆದುಹಾಕಿರುವುದಕ್ಕೆ ದಾಖಲೆ ಸಹಿತ ಸಾಬೀತುಪಡಿಸಲಿ. ಅಂತಹ ಪ್ರಕರಣ ಇಲ್ಲದಿದ್ದರೆ ಸುಳ್ಳು ಆರೋಪ ಮಾಡಿರುವುದಕ್ಕಾಗಿ ಕಾಂಗ್ರೆಸ್ ನಾಯಕರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ರಾಜಕೀಯವಾಗಿ ಎದುರಿಸಲು ಸಾಧ್ಯವಾಗದೆ ಹಾಗೂ ಜನರ ವಿಶ್ವಾಸ ಗಳಿಸುವಲ್ಲಿ ವಿಫಲವಾಗಿರುವ ಕಾಂಗ್ರೆಸ್, ಹತಾಶೆಯಿಂದ ಚುನಾವಣಾ ಆಯೋಗ ಮತ್ತು ಎಸ್‌ಐಆರ್ ಪ್ರಕ್ರಿಯೆಯ ವಿರುದ್ಧ ಆರೋಪ ಮಾಡುತ್ತಿದೆ. ಪ್ರತಿಭಟನೆಯ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ. ವಿದೇಶಗಳಲ್ಲಿ ನಡೆದ ಹಿಂಸಾಚಾರದ ಮಾದರಿಯ ನೆರಳು ಈ ಪ್ರತಿಭಟನೆಗಳ ಹಿಂದಿರುವಂತೆ ಕಾಣುತ್ತಿದೆ ಎಂದು ಅವರು ಆರೋಪಿಸಿದರು.

ಎಸ್‌ಐಆರ್ ಪ್ರಕ್ರಿಯೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭವಾದುದಲ್ಲ. ದೇಶದಲ್ಲಿ ಈಗಾಗಲೇ 12 ಬಾರಿ ಈ ಪ್ರಕ್ರಿಯೆ ನಡೆದಿದೆ. ಮೃತಪಟ್ಟವರು, ಸ್ಥಳಾಂತರಗೊಂಡವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವವರನ್ನು ಗುರುತಿಸಿ, ಸಂವಿಧಾನಬದ್ಧ ನಿಯಮಗಳ ಪ್ರಕಾರ ಮತದಾರರ ಪಟ್ಟಿಯನ್ನು ಪರಿಷ್ಕರಿಸುವುದು ಇದರ ಉದ್ದೇಶವಾಗಿದೆ. ನೆಹರು, ಇಂದಿರಾ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ಕಾಲದಲ್ಲಿ ಇದೇ ಪ್ರಕ್ರಿಯೆ ನಡೆದಾಗ ಆಕ್ಷೇಪಿಸದ ಕಾಂಗ್ರೆಸ್, ಬಿಜೆಪಿ ಅಧಿಕಾರದಲ್ಲಿರುವಾಗ ಮಾತ್ರ ವಿರೋಧಿಸುತ್ತಿರುವುದು ಅದರ ದ್ವಂದ್ವ ನಿಲುವನ್ನು ತೋರಿಸುತ್ತದೆ ಎಂದರು.

ಎಸ್‌ಐಆರ್ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರದ ಇಲಾಖೆಗಳು ನೇರವಾಗಿ ನಿರ್ವಹಿಸುವುದಿಲ್ಲ. ರಾಜ್ಯ ಸರ್ಕಾರದ ಕಂದಾಯ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಶೇ.99ರಷ್ಟು ಕಾರ್ಯ ನಿರ್ವಹಿಸುತ್ತಾರೆ. ವಿವಿಧ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳಾದ ಬಿಎಲ್‌ಎ-1 ಮತ್ತು ಬಿಎಲ್‌ಎ-2 ಅವರ ಉಪಸ್ಥಿತಿ ಹಾಗೂ ಸಹಭಾಗಿತ್ವದಲ್ಲಿ ಪ್ರಕ್ರಿಯೆ ನಡೆಯುವುದರಿಂದ ಪಾರದರ್ಶಕತೆಗೆ ಅವಕಾಶವಿದೆ. ಇಷ್ಟಿದ್ದರೂ ರಾಜ್ಯ ಸರ್ಕಾರದ ಅಧಿಕಾರಿಗಳ ಕಾರ್ಯವೈಖರಿಯನ್ನೇ ಪ್ರಶ್ನಿಸುವ ರೀತಿಯಲ್ಲಿ ಕಾಂಗ್ರೆಸ್ ಆರೋಪ ಮಾಡುತ್ತಿರುವುದು ವಿಷಾದನೀಯ ಎಂದು ಹೇಳಿದರು.

ಎಸ್‌ಐಆರ್ ಕಾರ್ಯದಲ್ಲಿ ಒತ್ತಡದ ನಡುವೆಯೂ ಬೂತ್ ಮಟ್ಟದ ಅಧಿಕಾರಿಗಳಿಂದ ಹಿಡಿದು ಉನ್ನತ ಅಧಿಕಾರಿಗಳವರೆಗೆ ಎಲ್ಲರೂ ಶ್ರಮಿಸಿದ್ದಾರೆ. ಅವರ ಪರಿಶ್ರಮ ಮತ್ತು ಪ್ರಾಮಾಣಿಕತೆಯನ್ನು ಅನುಮಾನಿಸುವ ರೀತಿಯಲ್ಲಿ ಆರೋಪ ಮಾಡುವುದು ಸರಿಯಲ್ಲ ಎಂದರು.

ಕಾಂಗ್ರೆಸ್ ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಚುನಾವಣೆಯಲ್ಲಿ ಗೆದ್ದಾಗ ಚುನಾವಣಾ ಆಯೋಗದ ಕಾರ್ಯವೈಖರಿ ಸರಿಯಾಗಿಯೇ ಇತ್ತೇ? ಬಿಜೆಪಿ ಸೋಲನ್ನು ಜನಾದೇಶವೆಂದು ಸ್ವೀಕರಿಸಿದೆ. ಆದರೆ ಕಾಂಗ್ರೆಸ್ ಮಾತ್ರ ಸೋಲಿನ ಸಂದರ್ಭಗಳಲ್ಲಿ ಚುನಾವಣಾ ಆಯೋಗವನ್ನು ದೂಷಿಸುವ ಪ್ರವೃತ್ತಿ ಬೆಳೆಸಿಕೊಂಡಿದೆ ಎಂದು ಟೀಕಿಸಿದರು. ಕೇರಳದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆದಿದ್ದರಿಂದಲೇ ತಮ್ಮ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ಅಲ್ಲಿನ ಮುಖ್ಯಮಂತ್ರಿ ಹೇಳಿದ್ದಾರೆ. ರಾಜ್ಯದಲ್ಲಿಯೂ ಎಸ್‌ಐಆರ್ ಪ್ರಕ್ರಿಯೆ ಸರಿಯಾಗಿ ನಡೆದಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಒಪ್ಪಿಕೊಂಡಿದ್ದರು. ಬಳಿಕ ಅವರಿಂದ ಬೇರೆ ರೀತಿಯ ಹೇಳಿಕೆ ಕೊಡಿಸಲಾಗಿದೆ ಎಂದು ಆರೋಪಿಸಿದರು.

ಸ್ವತಂತ್ರ ಭಾರತದ ಮೊದಲ ಪ್ರಧಾನಿ ಆಯ್ಕೆ ಸಂದರ್ಭದಲ್ಲಿ ಕಾಂಗ್ರೆಸ್‌ನ ಆಂತರಿಕ ಚುನಾವಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಬಹುಮತ ದೊರೆತಿದ್ದರೂ, ಅದನ್ನು ಕಡೆಗಣಿಸಿ ಜವಾಹರಲಾಲ್ ನೆಹರು ಅವರನ್ನು ಪ್ರಧಾನಿಯನ್ನಾಗಿ ಮಾಡಲಾಗಿತ್ತು. ಇದು ದೇಶದ ಮೊದಲ ವೋಟ್ ಚೋರಿ ಎಂದು ಕಾಂಗ್ರೆಸ್ ವಿರುದ್ಧ ವೇದವ್ಯಾಸ ಕಾಮತ್ ವಾಗ್ದಾಳಿ ನಡೆಸಿದರು.

ಜನಾದೇಶವನ್ನು ಪ್ರಶ್ನಿಸುವುದು ಹಾಗೂ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಜನರಿಗೆ ಅನುಮಾನ ಮೂಡಿಸುವ ಪ್ರಯತ್ನ ಸಂವಿಧಾನಕ್ಕೆ ಮಾಡುವ ದ್ರೋಹವಾಗಿದೆ. ಆದ್ದರಿಂದ ಕಾಂಗ್ರೆಸ್ ನಾಯಕರು ತಮ್ಮ ಆರೋಪಗಳಿಗೆ ದಾಖಲೆ ಒದಗಿಸಬೇಕು ಅಥವಾ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಜನರಿಂದ ಇನ್ನಷ್ಟು ತೀವ್ರವಾಗಿ ತಿರಸ್ಕೃತರಾಗಲಿದ್ದಾರೆ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಮತ್ತು ಲಲೇಶ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ ಎಂ., ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಪೂರ್ಣಿಮಾ ರಾವ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದೀಪಕ್ ಡಿಸೋಜ, ಮೂಡ ಮಾಜಿ ಅಧ್ಯಕ್ಷ ರವಿಶಂಕರ್ ಮಿಜಾರ್, ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷ ನಿತಿನ್ ಕುಮಾರ್ ಹಾಗೂ ಮಂಡಲ ಕಾರ್ಯದರ್ಶಿ ಸುಮತಿ ಚಂದ್ರಶೇಖರ್ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!