
ಮಂಗಳೂರು: ಮಂಗಳೂರು ನಗರದಲ್ಲಿ ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪದ ಮೇಲೆ 42 ವರ್ಷದ ಮಹಿಳೆಯೊಬ್ಬರನ್ನು ಬಂಧಿಸಲಾಗಿದ್ದು, ಬರೋಬ್ಬರಿ 15 ಲಕ್ಷದ 30 ಸಾವಿರ ರೂಪಾಯಿ ಮೌಲ್ಯದ MDMA ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಮಹಿಳೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲ ನಿವಾಸಿ ನಸೀಮ ಎಂದು ಗುರುತಿಸಲಾಗಿದೆ.

ನವೆಂಬರ್ 1ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಾದಕ ವಸ್ತು ಸೇವನೆ ಪ್ರಕರಣದ ತನಿಖೆ ವೇಳೆ ನಸೀಮಾ ಮಾದಕ ವಸ್ತು ಪೂರೈಸುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಆಕೆಯ ಪೂರೈಕೆ ಜಾಲದ ಬಗ್ಗೆ ತನಿಖೆ ಕೈಗೊಂಡ ಪೊಲೀಸರು, ಮಂಗಳೂರಿನ ಪಂಪ್ವೆಲ್ ಉಜ್ಜೋಡಿ ಸಮೀಪದ ರಾಧಾ ರೆಸಿಡೆನ್ಸಿ ಅಪಾರ್ಟ್ಮೆಂಟ್ನ ಮೊದಲ ಮಹಡಿಯಲ್ಲಿರುವ ಫ್ಲ್ಯಾಟ್ ನಂಬರ್ 103ರ ಮೇಲೆ ದಾಳಿ ನಡೆಸಿದ್ದಾರೆ.

ಈ ವೇಳೆ ಫ್ಲ್ಯಾಟ್ನಲ್ಲಿ ಸಂಗ್ರಹಿಸಿಟ್ಟಿದ್ದ 153 ಗ್ರಾಂ MDMA ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರ ಅಂದಾಜು ಮೌಲ್ಯ 15.30 ಲಕ್ಷ ರೂಪಾಯಿ ಎಂದು ತಿಳಿದುಬಂದಿದೆ.
ವಿಚಾರಣೆ ವೇಳೆ ಆರೋಪಿ ನಸೀಮಾ ಮಂಗಳೂರು ನಗರದಾದ್ಯಂತ ಯುವಕರು ಹಾಗೂ ವಿದ್ಯಾರ್ಥಿಗಳಿಗೆ MDMA ಮಾರಾಟ ಮಾಡುತ್ತಿದ್ದ ಸಂಗತಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಇನ್ನು ಈ ಮಾದಕ ವಸ್ತು ಪೂರೈಕೆ ಜಾಲದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

