ಮಂಗಳೂರು: ಮಂಗಳೂರು: ಎಸ್‌ಐಆರ್ ಕುರಿತು ಕಾಂಗ್ರೆಸ್ ಸುಳ್ಳು ಮಾಹಿತಿ ಹರಡುವ ಮೂಲಕ ದೇಶಾದ್ಯಂತ ಗೊಂದಲ ಮತ್ತು ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ಶಾಸಕ ವೇದವ್ಯಾಸ ಕಾಮತ್, ಇದರ ವಿರುದ್ಧ ಜನಜಾಗೃತಿ ಮೂಡಿಸುವ ಉದ್ದೇಶದಿಂದ ನ.6ರಂದು ಬಿಜೆಪಿ ವತಿಯಿಂದ ಮಂಗಳೂರು ವಿಭಾಗ ಮಟ್ಟದ ‘ಪ್ರಜಾಪ್ರಭುತ್ವ ಉಳಿಸಿ–ಅರಾಜಕತೆ ಅಳಿಸಿ’ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದರು.


ಅಟಲ್ ಸೇವಾ ಕೇಂದ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಿಂದ 20 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ಮಂಗಳೂರು ದಕ್ಷಿಣ ಕ್ಷೇತ್ರದಿಂದಲೇ ಐದು ಸಾವಿರ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದರು.

ಅಂದು ಮಧ್ಯಾಹ್ನ 3 ಗಂಟೆಗೆ ಕ್ಲಾಕ್ ಟವರ್ ಬಳಿಯ ಮಿನಿ ವಿಧಾನಸೌಧದಿಂದ ಪಾದಯಾತ್ರೆ ಆರಂಭವಾಗಿ ಕದ್ರಿ ಮೈದಾನದಲ್ಲಿ ಸಮಾವೇಶಗೊಳ್ಳಲಿದೆ. ಸಭೆಯಲ್ಲಿ ಕೇಂದ್ರ ಸಚಿವ ಹಾಗೂ ನಟ ಸುರೇಶ್ ಗೋಪಿ ಮತ್ತು ಸಂಸದ ತೇಜಸ್ವಿ ಸೂರ್ಯ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯುವಜನರಿಗಾಗಿ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸ್ಟಾರ್ಟ್‌ಅಪ್ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ ಕಾಂಗ್ರೆಸ್ ಯುವಜನರನ್ನು ರಾಜಕೀಯ ಸಂಘರ್ಷಕ್ಕೆ ಬಳಸಿಕೊಳ್ಳುತ್ತಿದೆ. ಮತದಾರರ ಪಟ್ಟಿ ಪರಿಷ್ಕರಣೆ ಈ ಹಿಂದೆಯೂ ನಡೆದಿದ್ದು, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೇ ಹಲವು ಬಾರಿ ನಡೆದಿದೆ ಎಂದು ಹೇಳಿದರು.
ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆ, ಭ್ರಷ್ಟಾಚಾರ ಹಾಗೂ ತೆರಿಗೆ ಮತ್ತು ಬೆಲೆ ಏರಿಕೆಯಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧವೂ ಟೀಕಿಸಿದರು. ದೇಶದ ಸಂವಿಧಾನ, ನ್ಯಾಯಾಂಗ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅಭಿಯಾನದ ಉದ್ದೇಶವಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಂಡಲದ ಬಿಜೆಪಿ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ, ಲಲೇಶ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಕಾರ್ಯದರ್ಶಿ ಪೂರ್ಣಿಮಾ ಎಂ, ಮಂಡಲದ ಯುವ ಮೋರ್ಚಾ ಅಧ್ಯಕ್ಷರಾದ ಅಶ್ವಿತ್ ಕೊಟ್ಟಾರಿ, ಪ್ರಮುಖರಾದ ವಿನೋದ್ ಮೆಂಡನ್, ಸುರೇಖಾ ಹೆಗ್ಡೆ, ಸುಕೇಶ್ ಅಳಪೆ, ಪ್ರವೀಣ್ ನಿಡ್ಡೇಲ್, ಉಪಸ್ಥಿತರಿದ್ದರು.

