ಮಂಗಳೂರು: ರಾಜ್ಯದಲ್ಲಿ ಆಡಳಿತ ಸುಧಾರಣೆ, ಶಿಕ್ಷಣ, ಆರೋಗ್ಯ, ಸಾರಿಗೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಬೇಕಿದ್ದ ಕಾಂಗ್ರೆಸ್ ಸರ್ಕಾರ ರಾಜಕೀಯ ಕಚ್ಚಾಟದಲ್ಲೇ ಕಾಲ ಕಳೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ನೀಡಿದ್ದ ಅಭಿವೃದ್ಧಿ ಭರವಸೆಗಳು ಈಡೇರಿಲ್ಲ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್ ಆರೋಪಿಸಿದರು.

ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಮತ್ತು ಮೂಲಸೌಕರ್ಯ ಅಭಿವೃದ್ಧಿಯ ಭರವಸೆ ನೀಡಿದ್ದರೂ, ನಿರೀಕ್ಷಿತ ಪ್ರಗತಿ ಕಂಡುಬಂದಿಲ್ಲ. ಸರ್ಕಾರಿ ಶಾಲೆಗಳ ಶಿಥಿಲ ಕಟ್ಟಡಗಳ ದುರಸ್ತಿ, ಪಿಯುಸಿ ಕಾಲೇಜುಗಳ ಡಿಜಿಟಲೀಕರಣ ಹಾಗೂ ಉಚಿತ ಪಠ್ಯಪುಸ್ತಕ ವಿತರಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ದೂರಿದರು.

ಇ-ಖಾತೆ, ಹೋಂಸ್ಟೇ ಅನುಮತಿ ಸೇರಿದಂತೆ ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಮತ್ತು ಲಂಚದ ಬೇಡಿಕೆ ಹೆಚ್ಚಾಗಿದೆ ಎಂಬ ದೂರುಗಳಿವೆ. ಸಾರಿಗೆ ಸಂಸ್ಥೆಗಳ ಆರ್ಥಿಕ ನಷ್ಟ ಹಾಗೂ ಬಸ್ ದರ ಏರಿಕೆಯ ಬಗ್ಗೆಯೂ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಜನರ ಮೂಲಭೂತ ಸಮಸ್ಯೆಗಳಿಗೆ ಆದ್ಯತೆ ನೀಡುತ್ತಿಲ್ಲ. ರಾಜ್ಯದಲ್ಲಿ ಭ್ರಷ್ಟಾಚಾರ ವಿರೋಧಿ ರಾಜಕೀಯ ಪರ್ಯಾಯದ ಅಗತ್ಯವಿದ್ದು, ಆಮ್ ಆದ್ಮಿ ಪಕ್ಷಕ್ಕೆ ಜನರು ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ಮಂಗಳೂರು ನಗರ ದಕ್ಷಿಣ ಅಧ್ಯಕ್ಷ ವಾಸುದೇವ್, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಸೀಮಾ ಮಡಿವಾಳ, ಜಿಲ್ಲಾ ಕಾರ್ಯದರ್ಶಿಗಳಾದ ಕಬೀರ್ ಕಾಟಿಪಳ್ಳ, ಲೆಸ್ಲಿ ಫೆರ್ನಾಂಡಿಸ್ ಹಾಗೂ ರಾಘವ ಶೆಟ್ಟಿ ಉಪಸ್ಥಿತರಿದ್ದರು.

