ಮಂಗಳೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕ ಬಂಧನ

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಯುವಕನನ್ನು ಪಣಂಬೂರು ಪೊಲೀಸರು ಬಂಧಿಸಿ, ಸುಮಾರು 3 ಕೆ.ಜಿ. 800 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ನವೆಂಬರ್ 5ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಗಾಂಜಾ ಮಾರಾಟ ಮಾಡಲು ತಂದಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಹಾಗೂ ಪಣಂಬೂರು ಠಾಣೆಯ ಪೊಲೀಸರು ಜಂಟಿಯಾಗಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಡ್ನೂರು ಪೋಸ್ಟ್, ಪಡ್ಡಾಯೂರ್ ಹೌಸ್ ನಿವಾಸಿ ಮೊಹಮ್ಮದ್ ನಿಸಾರ್ (23) ಎಂದು ಗುರುತಿಸಲಾಗಿದೆ.

ಆರೋಪಿಯಿಂದ ಅಂದಾಜು 1 ಲಕ್ಷದ 90 ಸಾವಿರ ರೂಪಾಯಿ ಮೌಲ್ಯದ 3.8 ಕೆ.ಜಿ. ಗಾಂಜಾ, 4 ಸಾವಿರ ರೂಪಾಯಿ ಮೌಲ್ಯದ ಮೊಬೈಲ್ ಫೋನ್ ಹಾಗೂ ಗಾಂಜಾ ಸಾಗಾಟಕ್ಕೆ ಬಳಸಿದ್ದ ಅಂದಾಜು 2 ಲಕ್ಷ ರೂಪಾಯಿ ಮೌಲ್ಯದ ಕೆಎಲ್ 14 1662 ನೋಂದಣಿ ಸಂಖ್ಯೆಯ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ಸುಮಾರು 3 ಲಕ್ಷದ 94 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ.

ಆರೋಪಿಯು ಸುರತ್ಕಲ್, ಪಣಂಬೂರು, ಕಾವೂರು ಸೇರಿದಂತೆ ಮಂಗಳೂರು ನಗರದ ಪ್ರಮುಖ ಪ್ರದೇಶಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಅಲ್ಲದೆ, ಈ ಹಿಂದೆಯೂ ಹಲವು ಬಾರಿ ಮಂಗಳೂರು ನಗರದಲ್ಲಿ ಗಾಂಜಾ ಮಾರಾಟ ಮಾಡಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 137/2026ರಂತೆ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(C), 20(b)(ii)(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!