ಉಳ್ಳಾಲ ತಾಲೂಕಿಗೆ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಒದಗಿಸಲು ಆಗ್ರಹ

ಮಂಗಳೂರು: ಉಳ್ಳಾಲ ತಾಲೂಕು ಹಾಗೂ ಮಂಗಳೂರು ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರವನ್ನು ಆರಂಭಿಸಬೇಕೆಂದು ವಕೀಲರಾದ ಮಹಮ್ಮದ್ ಅಸ್ಗರ್ ಅವರು ಆಗ್ರಹಿಸಿದ್ದಾರೆ.

ಸುಮಾರು ಮೂರು ವರ್ಷಗಳ ಹಿಂದೆ ಕ್ಷೇತ್ರದ ವಿವಿಧ ಗ್ರಾಮೀಣ ಭಾಗಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಆರಂಭಗೊಂಡಿದ್ದರೂ, ನಂತರದ ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾದ ಪ್ರಮಾಣದಲ್ಲಿ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಿಲ್ಲ. ಇದರಿಂದಾಗಿ ಸಾರ್ವಜನಿಕರು ಪ್ರತಿದಿನ ಪ್ರಯಾಣದ ಸಮಸ್ಯೆ ಎದುರಿಸುವಂತಾಗಿದೆ.

ವಿಶೇಷವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಿಗಳು, ಮಹಿಳೆಯರು ಹಾಗೂ ದಿನನಿತ್ಯ ಸರ್ಕಾರಿ ಬಸ್‌ಗಳನ್ನೇ ಅವಲಂಬಿಸಿರುವ ಸಾರ್ವಜನಿಕರು ಸಮಯಕ್ಕೆ ಸರಿಯಾಗಿ ತಮ್ಮ ಗಮ್ಯಸ್ಥಾನ ತಲುಪಲು ಸಾಧ್ಯವಾಗದೆ ತೊಂದರೆ ಅನುಭವಿಸುತ್ತಿದ್ದಾರೆ. ಕೆಲವೊಂದು ಮಾರ್ಗಗಳಲ್ಲಿ ಬಸ್‌ಗಳ ಕೊರತೆಯಿಂದಾಗಿ ಪ್ರಯಾಣಿಕರು ಬಸ್‌ಗಳಿಗಾಗಿ ದೀರ್ಘಕಾಲ ಕಾಯುವ ಪರಿಸ್ಥಿತಿಯೂ ನಿರ್ಮಾಣವಾಗಿದೆ.

ಮುಡಿಪು, ಇರಾ, ಬಿ.ಸಿ.ರೋಡ್, ಮಂಜನಾಡಿ, ಉಳ್ಳಾಲ ಹಾಗೂ ಮಂಗಳೂರು ಸಂಪರ್ಕಿಸುವ ಪ್ರಮುಖ ಮಾರ್ಗಗಳಲ್ಲಿ ಪ್ರಯಾಣಿಕರ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಜನಸಂಖ್ಯೆ ಮತ್ತು ಪ್ರಯಾಣಿಕರ ಅಗತ್ಯಕ್ಕೆ ಅನುಗುಣವಾಗಿ ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸುವುದು ಅತ್ಯಗತ್ಯವಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಯು.ಟಿ. ಖಾದರ್ ಅವರು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಪಟ್ಟ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಉಳ್ಳಾಲ ತಾಲೂಕು ಹಾಗೂ ಮಂಗಳೂರು ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗಗಳಿಗೆ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಮಂಜೂರು ಮಾಡಿಸಲು ವಿಶೇಷ ಮುತುವರ್ಜಿ ವಹಿಸಬೇಕು ಎಂದು ಮಹಮ್ಮದ್ ಅಸ್ಗರ್ ಅವರು ಒತ್ತಾಯಿಸಿದ್ದಾರೆ.

ಸಾರ್ವಜನಿಕ ಸಾರಿಗೆ ಎಂಬುದು ಜನರ ದೈನಂದಿನ ಬದುಕಿನ ಪ್ರಮುಖ ಅವಶ್ಯಕತೆಯಾಗಿದೆ. ವಿದ್ಯಾರ್ಥಿಗಳ ಶಿಕ್ಷಣ, ಉದ್ಯೋಗಿಗಳ ಸಮಯ ಹಾಗೂ ಮಹಿಳೆಯರ ಸುರಕ್ಷಿತ ಪ್ರಯಾಣವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ತಕ್ಷಣ ಕ್ರಮ ಕೈಗೊಂಡು ಸಾರ್ವಜನಿಕರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!