ಮಂಗಳೂರು: ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಆಡಳಿತದ ವಿರುದ್ಧ ಜನಾಭಿಪ್ರಾಯ ರೂಪಿಸಿ, ಸಂಘಟಿತ ಹೋರಾಟ ನಡೆಸಲು ಜನತಾದಳ (ಜಾತ್ಯತೀತ) ಪಕ್ಷ ಸಜ್ಜಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ವಸಂತ ಪೂಜಾರಿ ತಿಳಿಸಿದರು.
ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ 12ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಮಂಗಳೂರಿನ ಕೊಡಿಯಾಲ್ಬೈಲ್ನ ಓಷನ್ ಪರ್ಲ್ ಹೋಟೆಲ್ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಸರ್ವಸದಸ್ಯರ ಸಭೆ ಹಾಗೂ ನೂತನವಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಆರ್. ಧನರಾಜ್ ಅವರ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಹಾಗೂ ರಾಜ್ಯ ಸರ್ಕಾರದ ಆಡಳಿತ ವೈಖರಿಯನ್ನು ಜೆಡಿಎಸ್ ಪಕ್ಷ ಗಂಭೀರವಾಗಿ ಗಮನಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರಚಾರದೊಂದಿಗೆ ಸಂಪುಟ ಸಭೆ ನಡೆಸಿ, ಜಿಲ್ಲೆಯ ಜನರಿಗೆ ಹಲವು ಭರವಸೆಗಳನ್ನು ನೀಡಿದ್ದ ರಾಜ್ಯ ಸರ್ಕಾರವು ಅವುಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗಿಲ್ಲ. ಜನಸಾಮಾನ್ಯರ ಬದುಕನ್ನು ಸಬಲೀಕರಣಗೊಳಿಸುವ ಬದಲು, ಹಾಲು, ಮೊಸರು, ಬಸ್ ಪ್ರಯಾಣ ದರ ಹಾಗೂ ಹೋಟೆಲ್ಗಳ ದರ ಏರಿಕೆಯಂತಹ ಬೆಳವಣಿಗೆಗಳು ಜನಸಾಮಾನ್ಯರು ಮತ್ತು ವಿವಿಧ ಕ್ಷೇತ್ರಗಳನ್ನು ಅವಲಂಬಿಸಿರುವ ಉದ್ಯೋಗಿಗಳಿಗೆ ಆರ್ಥಿಕ ಹೊರೆಯಾಗಿ ಪರಿಣಮಿಸಿವೆ ಎಂದು ಆರೋಪಿಸಿದರು.

ವಿವಿಧ ಹಗರಣಗಳ ಆರೋಪಗಳಿಂದ ಸುತ್ತುವರಿದಿರುವ ರಾಜ್ಯ ಸರ್ಕಾರದ ವಿರುದ್ಧ ಜನರ ಅಸಮಾಧಾನ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಲ್ಲೂ ಗೃಹಲಕ್ಷ್ಮಿ ಯೋಜನೆಯ ಮೂರು ತಿಂಗಳ ಬಾಕಿ ಹಣವನ್ನು ಹಬ್ಬದ ಮುನ್ನ ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರ ವ್ಯಾಪಕ ಪ್ರಚಾರ ನಡೆಸಿದ್ದರೂ, ಹಲವು ಫಲಾನುಭವಿಗಳಿಗೆ ಇಂದಿಗೂ ಹಣ ತಲುಪಿಲ್ಲ. ಇದು ಸರ್ಕಾರದ ಘೋಷಣೆಗಳಿಗೂ ವಾಸ್ತವ ಅನುಷ್ಠಾನಕ್ಕೂ ಇರುವ ಅಂತರವನ್ನು ಎತ್ತಿತೋರಿಸುತ್ತದೆ ಎಂದು ವಸಂತ ಪೂಜಾರಿ ಟೀಕಿಸಿದರು.

ಜನರ ದೈನಂದಿನ ಬದುಕಿಗೆ ಸಂಬಂಧಿಸಿದ ಇಂತಹ ಹಲವು ಸಮಸ್ಯೆಗಳು, ಸರ್ಕಾರದ ಆಡಳಿತಾತ್ಮಕ ವೈಫಲ್ಯಗಳು ಹಾಗೂ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಸಮಗ್ರವಾಗಿ ಚರ್ಚಿಸುವುದು ಸಭೆಯ ಪ್ರಮುಖ ಉದ್ದೇಶವಾಗಿದೆ. ಜನಾಭಿಪ್ರಾಯವನ್ನು ಒಗ್ಗೂಡಿಸಿ, ಜನರ ಸಮಸ್ಯೆಗಳಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಹೋರಾಟದ ರೂಪುರೇಷೆಗಳನ್ನು ಸಭೆಯಲ್ಲಿ ನಿರ್ಧರಿಸಲಾಗುವುದು ಎಂದರು.

ಜಿಲ್ಲಾಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ರಾಜ್ಯದ ಹಿರಿಯ ನಾಯಕರು, ನೂತನವಾಗಿ ಆಯ್ಕೆಯಾದ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಪಕ್ಷದ ವಿವಿಧ ಹಂತಗಳ ಪ್ರಮುಖ ಮುಖಂಡರು ಭಾಗವಹಿಸಲಿದ್ದಾರೆ. ಜಿಲ್ಲೆಯ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಮುಂದಿನ ಹೋರಾಟದ ಕಾರ್ಯತಂತ್ರಗಳ ಕುರಿತು ಮಹತ್ವದ ಚರ್ಚೆ ನಡೆಯಲಿದೆ. ಆದ್ದರಿಂದ ಪಕ್ಷದ ಎಲ್ಲಾ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್. ಧನರಾಜ್, ಪ್ರಮುಖರಾದ ಶಶಿರಾಜ್ ಶೆಟ್ಟಿ ಕೊಳಂಬೆ, ಯೋಗೀಶ್ ಶೆಟ್ಟಿ ಜೆಪ್ಪು, ಅಝೀಝ್ ಕುದ್ರೋಳಿ, ರತ್ನಾಕರ್ ಸುವರ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

