ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕ್‌ಆಫ್‌ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನದ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಪೈಲಟ್‌ನ ಸಮಯಪ್ರಜ್ಞೆಯಿಂದ ವಿಮಾನದಲ್ಲಿದ್ದ 236 ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ.
ಟೇಕ್‌ಆಫ್‌ಗಾಗಿ ರನ್‌ವೇಯಲ್ಲಿ ವೇಗವಾಗಿ ಚಲಿಸುತ್ತಿದ್ದ ವೇಳೆ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಪೈಲಟ್ ವಿಮಾನಕ್ಕೆ ತುರ್ತು ಬ್ರೇಕ್ ಹಾಕಿ ಟೇಕ್‌ಆಫ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದ್ದಾರೆ. ಬಳಿಕ ವಿಮಾನವನ್ನು ಸುರಕ್ಷಿತವಾಗಿ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ. ಇಂಡಿಗೋ ಸಂಸ್ಥೆಯು ಪ್ರಯಾಣಿಕರ ಮುಂದಿನ ಪ್ರಯಾಣಕ್ಕಾಗಿ ಪರ್ಯಾಯ ವಿಮಾನದ ವ್ಯವಸ್ಥೆ ಮಾಡಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲೂ ಟೇಕ್‌ಆಫ್ ರದ್ದು
ಇದೇ ದಿನ ಬೆಳಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಇಂಡಿಗೋ ವಿಮಾನದಲ್ಲಿ ಇಂತಹದ್ದೇ ಘಟನೆ ಸಂಭವಿಸಿದೆ. ಬೆಳಗ್ಗೆ 7.20ಕ್ಕೆ ಹೊರಡಬೇಕಿದ್ದ ವಿಮಾನವು ಟೇಕ್‌ಆಫ್‌ಗೆ ಅನುಮತಿ ಪಡೆದು ರನ್‌ವೇಯಲ್ಲಿ ವೇಗವಾಗಿ ಸಾಗುತ್ತಿದ್ದಾಗ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಕೂಡಲೇ ಪೈಲಟ್ ತುರ್ತು ಬ್ರೇಕ್ ಹಾಕಿ ವಿಮಾನವನ್ನು ನಿಲ್ಲಿಸಿದ್ದಾರೆ.

ಈ ವೇಳೆ ವಿಮಾನದಲ್ಲಿದ್ದ ಪ್ರಯಾಣಿಕರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕ್ಯಾಬಿನ್ ಸಿಬ್ಬಂದಿ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಯಾಣಿಕರಿಗೆ ತಲೆ ಕೆಳಗೆ ಬಾಗಿಸುವಂತೆ ಸೂಚನೆ ನೀಡಿದ್ದಾರೆ. ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಟೇಕ್‌ಆಫ್ ರದ್ದುಗೊಳಿಸಿರುವುದಾಗಿ ಸಿಬ್ಬಂದಿ ಪ್ರಯಾಣಿಕರಿಗೆ ಮಾಹಿತಿ ನೀಡಿದ್ದಾರೆ.
ಸುಮಾರು 30 ನಿಮಿಷಗಳ ಕಾಲ ರನ್‌ವೇಯಲ್ಲಿ ನಿಂತಿದ್ದ ವಿಮಾನದಿಂದ ಬಳಿಕ ಪ್ರಯಾಣಿಕರನ್ನು ಕೆಳಗಿಳಿಸಿ ಪರ್ಯಾಯ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ.
ಒಂದೇ ದಿನ ಮಂಗಳೂರು ಮತ್ತು ಬೆಂಗಳೂರಿನಲ್ಲಿ ಎರಡು ಇಂಡಿಗೋ ವಿಮಾನಗಳ ಟೇಕ್‌ಆಫ್ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿರುವುದು ವಿಮಾನ ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಎರಡೂ ಘಟನೆಗಳಲ್ಲಿ ಪೈಲಟ್‌ಗಳ ಸಮಯಪ್ರಜ್ಞೆ ಹಾಗೂ ತಕ್ಷಣದ ನಿರ್ಧಾರದಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

