ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಆಹಾರ ಸುರಕ್ಷತಾ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿದ್ದು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಆಹಾರ ತಯಾರಿಕಾ ಘಟಕಗಳಲ್ಲಿ ಅನಿರೀಕ್ಷಿತ ಪರಿಶೀಲನೆ ನಡೆಸಿದ್ದಾರೆ.
ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಎಚ್. ನೇತೃತ್ವದಲ್ಲಿ ಐದು ವಿಶೇಷ ತಂಡಗಳನ್ನು ರಚಿಸಿ ಈ ಕಾರ್ಯಾಚರಣೆ ನಡೆಸಲಾಗಿದೆ.

ತಲಪಾಡಿಯಲ್ಲಿರುವ ಉಡುಪಿ ಕೆಫೆ ರೆಸ್ಟೋರೆಂಟ್‌ನ ಅಡುಗೆಮನೆಗೆ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಆಹಾರ ತಯಾರಿಕೆಯಲ್ಲಿ ಸುರಕ್ಷತಾ ನಿಯಮಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿದ್ದಾರೆ. ಅಲ್ಲದೆ, ಆಹಾರದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ರವಾನಿಸಿದ್ದಾರೆ.
ಇನ್ನು ತೊಕ್ಕೊಟ್ಟು ಸಮೀಪದ ಸೇವಂತಿ ಗುಡ್ಡೆಯಲ್ಲಿರುವ ಎಂ.ಆರ್. ಸ್ವೀಟ್ಸ್ ಘಟಕದ ಮೇಲೂ ದಾಳಿ ನಡೆಸಲಾಗಿದೆ. ಇಲ್ಲಿ ಅಗತ್ಯ ನೈರ್ಮಲ್ಯ ಕಾಪಾಡಿಕೊಳ್ಳದೆ ಸ್ವೀಟ್ ಹಾಗೂ ಇತರ ಆಹಾರ ಪದಾರ್ಥಗಳನ್ನು ತಯಾರಿಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಘಟಕವನ್ನು ಸೀಝ್ ಮಾಡಲಾಗಿದೆ. ಈ ಸಂಬಂಧ ಎಡಿಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಇದೇ ವೇಳೆ ಕೊಲ್ಯದಲ್ಲಿರುವ ಐಡಿಯಲ್ ಐಸ್‌ಕ್ರೀಮ್‌ನ ಕೋಲ್ಡ್ ಸ್ಟೋರೇಜ್ ಘಟಕದಲ್ಲೂ ಪರಿಶೀಲನೆ ನಡೆಸಲಾಗಿದೆ. ಐಸ್‌ಕ್ರೀಮ್ ಸಂಗ್ರಹಣೆ ವೇಳೆ ಪಾಲಿಸಬೇಕಾದ ಆಹಾರ ಸುರಕ್ಷತಾ ನಿಯಮಗಳ ಕುರಿತು ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.
ಪರಿಶೀಲನೆ ವೇಳೆ ಕಂಡುಬಂದಿರುವ ಲೋಪದೋಷಗಳ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಘಟಕಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಜಿಲ್ಲೆಯಾದ್ಯಂತ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಇಂತಹ ಅನಿರೀಕ್ಷಿತ ತಪಾಸಣೆಗಳು ಮುಂದುವರಿಯಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


