ಮಂಗಳೂರಿನಲ್ಲಿ ನವೆಂಬರ್ 30ರಂದು ಬೃಹತ್ ಉದ್ಯೋಗ ಮೇಳ; 200ಕ್ಕೂ ಅಧಿಕ ಕಂಪನಿಗಳ ಭಾಗಿ

ಮಂಗಳೂರು:* ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಕರಾವಳಿ ಭಾಗದ ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ನವೆಂಬರ್ 30, 2026ರಂದು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬೃಹತ್ ಉದ್ಯೋಗ ಮೇಳದಲ್ಲಿ 200ಕ್ಕೂ ಅಧಿಕ ಉದ್ಯೋಗದಾತ ಸಂಸ್ಥೆಗಳು ಹಾಗೂ 10 ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆಯಿದೆ. ಜಿಲ್ಲೆಯೂ ಸೇರಿದಂತೆ ಕರಾವಳಿ ಭಾಗದ ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಮಹತ್ವದ ವೇದಿಕೆಯಾಗಿ ಈ ಮೇಳ ರೂಪುಗೊಳ್ಳಲಿದೆ ಎಂದರು.

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ 10,089 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, ಯುವನಿಧಿ ಯೋಜನೆಯಡಿ 8,708 ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ. ಅಲ್ಲದೆ, ಯುವ ಉದ್ಯೋಗ ಸೇತು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿರುವ ಉದ್ಯೋಗಾಕಾಂಕ್ಷಿಗಳು ಹಾಗೂ ಜಿಲ್ಲೆಯ ಇತರ ನಿರುದ್ಯೋಗಿ ಯುವಜನರು ಈ ಮೇಳದಲ್ಲಿ ಭಾಗವಹಿಸಿ ಉದ್ಯೋಗ ಪಡೆಯಲು ಉತ್ತಮ ಅವಕಾಶವಿದೆ ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 17 ಇಂಜಿನಿಯರಿಂಗ್ ಕಾಲೇಜುಗಳು, 11 ಪಾಲಿಟೆಕ್ನಿಕ್ ಕಾಲೇಜುಗಳು, 25 ಸರ್ಕಾರಿ ಹಾಗೂ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳು, 115 ಪದವಿ ಕಾಲೇಜುಗಳು, 210 ಪದವಿ ಪೂರ್ವ ಕಾಲೇಜುಗಳು ಮತ್ತು 611 ಪ್ರೌಢಶಾಲೆಗಳಿವೆ. ಈ ಶಿಕ್ಷಣ ಸಂಸ್ಥೆಗಳಿಂದ ಪ್ರತಿವರ್ಷ ಸುಮಾರು 65 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಶಿಕ್ಷಣ ಪೂರ್ಣಗೊಳಿಸಿ ಹೊರಬರುತ್ತಿದ್ದು, ಅಂತಹ ಯುವಜನರಿಗೆ ಸೂಕ್ತ ಉದ್ಯೋಗ ದೊರಕಿಸಿಕೊಡುವ ಉದ್ದೇಶದಿಂದ ಮೇಳ ಆಯೋಜಿಸಲಾಗಿದೆ ಎಂದು ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಜೊತೆಗೆ ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳ ಉದ್ಯೋಗಾಕಾಂಕ್ಷಿಗಳೂ ಮೇಳದಲ್ಲಿ ಭಾಗವಹಿಸಲಿದ್ದಾರೆ. ವಿವಿಧ ಕ್ಷೇತ್ರಗಳ ಉದ್ಯೋಗದಾತ ಸಂಸ್ಥೆಗಳು ಭಾಗವಹಿಸುವುದರಿಂದ ಅಭ್ಯರ್ಥಿಗಳಿಗೆ ತಮ್ಮ ವಿದ್ಯಾರ್ಹತೆ ಮತ್ತು ಕೌಶಲ್ಯಕ್ಕೆ ಅನುಗುಣವಾಗಿ ಉದ್ಯೋಗ ಆಯ್ಕೆ ಮಾಡಿಕೊಳ್ಳಲು ಅವಕಾಶ ದೊರೆಯಲಿದೆ ಎಂದರು.

ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಉದ್ಯೋಗ ಮೇಳವನ್ನು ಉದ್ಘಾಟಿಸಲಿದ್ದು, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಶಿವಕಾಂತಮ್ಮ (ಕಾಂತ) ನಾಯಕ ಸೇರಿದಂತೆ ಸ್ಥಳೀಯ ಲೋಕಸಭಾ ಸದಸ್ಯರು, ವಿಧಾನಸಭೆ ಹಾಗೂ ವಿಧಾನಪರಿಷತ್ ಸದಸ್ಯರು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ ಊಟೋಪಚಾರದ ವ್ಯವಸ್ಥೆ ಕಲ್ಪಿಸಲಾಗುವುದು. ಜಿಲ್ಲೆಯ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಅರ್ಹ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಚಿವ ಯು.ಟಿ. ಖಾದರ್ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ ದರ್ಶನ್ ಹೆಚ್ ವಿ ಸಹಿತ ಮತ್ತಿತರರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!