ಮಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರೂವರೆ ವರ್ಷ ಕಳೆದಿದ್ದು, ಉಚಿತ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಆರ್ಥಿಕ ವ್ಯವಸ್ಥೆಯನ್ನು ಸಂಕಷ್ಟಕ್ಕೆ ದೂಡಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಜನರ ಮೂಗಿಗೆ ತುಪ್ಪ ಸವರಿ, ಮತ್ತೊಂದೆಡೆ ಬೆಲೆ ಏರಿಕೆಯ ಹೊರೆ ಹೊರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಾರಿಗೆ ದರ ಸೇರಿದಂತೆ ವಿವಿಧ ಸೇವೆಗಳ ದರ ಏರಿಕೆ ಅನಿವಾರ್ಯವಾಗಲಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದರು.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಬೇಡ, ಬೆಲೆ ಏರಿಕೆಯಿಂದ ಮುಕ್ತಿ ನೀಡಿ ಎಂದು ರಾಜ್ಯದ ಮಹಿಳೆಯರೇ ಹೇಳುತ್ತಿದ್ದಾರೆ. ತುಳು ಭಾಷೆಯಲ್ಲಿ ‘ಮಾತಾ ಪೈಸ ಕಾಲಿ’ ಎಂಬಂತೆ ಸರ್ಕಾರದ ಸ್ಥಿತಿ ಇದೆ ಎಂದು ವ್ಯಂಗ್ಯವಾಡಿದರು.
ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ ಸಂಪೂರ್ಣ ಹದಗೆಟ್ಟಿದೆ. ಸರ್ಕಾರಿ ಶಾಲೆಗಳ ಮಕ್ಕಳಿಗೆ ಸರಿಯಾಗಿ ಆಹಾರ ಧಾನ್ಯ ಪೂರೈಕೆಯಾಗುತ್ತಿಲ್ಲ. ಕಳೆದ ಒಂದು ತಿಂಗಳಿಂದ ಕೆಲವು ಶಾಲೆಗಳಿಗೆ ಅಕ್ಕಿ ಪೂರೈಕೆಯಾಗಿಲ್ಲ ಎಂಬ ಆರೋಪಗಳಿವೆ. ಮಕ್ಕಳಿಗೆ ಅನ್ನ ನೀಡಲು ಸಾಧ್ಯವಾಗದ ಸ್ಥಿತಿಗೆ ಸರ್ಕಾರ ತಲುಪಿದೆ. ಮತ್ತೊಂದೆಡೆ ಹಾಲಿನ ದರ ಏರಿಕೆ ಹಾಗೂ ಬಸ್ ಪ್ರಯಾಣ ದರ ಹೆಚ್ಚಳದ ಮೂಲಕ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹಾಕಲಾಗುತ್ತಿದೆ. ಸರ್ಕಾರ ಸಮರ್ಪಕವಾಗಿ ಆಡಳಿತ ನಡೆಸಿದ್ದರೆ ಈ ರೀತಿಯ ದರ ಏರಿಕೆಯ ಅಗತ್ಯವಿರಲಿಲ್ಲ ಎಂದು ಟೀಕಿಸಿದರು.

ಜನರ ಜೇಬು ಈಗಾಗಲೇ ಖಾಲಿಯಾಗಿದ್ದು, ಸರ್ಕಾರದ ಬೊಕ್ಕಸದಲ್ಲೂ ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ತೆರಿಗೆ ಸಂಗ್ರಹವಾದ ಬಳಿಕ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ನೀಡುವುದಾಗಿ ಸರ್ಕಾರ ಹೇಳುತ್ತಿದೆ. ಬೆಂಗಳೂರಿನಲ್ಲಿ ಸ್ವಚ್ಛತೆಯ ಸಮಸ್ಯೆಯೂ ತೀವ್ರವಾಗಿದೆ. ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಆರೋಪಿಸಿದರು.

ಅಲ್ಪಸಂಖ್ಯಾತರ ಕಲ್ಯಾಣದ ಹೆಸರಿನಲ್ಲಿ ಸರ್ಕಾರದ ಆದ್ಯತೆಗಳ ಬಗ್ಗೆ ಪ್ರಶ್ನೆಗಳಿವೆ. ಸಚಿವ ಸಂಪುಟದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಖರೀದಿಗೆ ತಲಾ 50 ಸಾವಿರ ರೂ. ಮೀಸಲಿಡುವ ನಿರ್ಧಾರ, ಉರ್ದು ಶಾಲೆಗಳ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ ಹಾಗೂ ಅಲ್ಪಸಂಖ್ಯಾತರ ಬಜೆಟ್ ಹೆಚ್ಚಳದ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ಕೆ.ಜಿ. ಹಳ್ಳಿ, ಡಿ.ಜೆ. ಹಳ್ಳಿ ಪ್ರಕರಣಗಳು ಹಾಗೂ ವಿಧಾನಸಭೆಯಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಪ್ರಕರಣವನ್ನು ಹಿಂಪಡೆಯುವ ಸಾಧ್ಯತೆಗಳ ಬಗ್ಗೆಯೂ ಆತಂಕವಿದೆ. ಕರ್ನಾಟಕದಲ್ಲಿ ಬಾಬರ್ ಆಡಳಿತ ನಡೆಯುತ್ತಿದೆಯೇ ಎಂಬ ಪ್ರಶ್ನೆ ಮೂಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಾಮ ಮತ್ತು ವಿಭೂತಿ ಹಚ್ಚಿಕೊಂಡ ಮಾತ್ರಕ್ಕೆ ಜನರು ನಂಬುವುದಿಲ್ಲ. ಸರ್ಕಾರದ ಆಡಳಿತ ಹಾಗೂ ಕಾರ್ಯವೈಖರಿಯೇ ಜನರ ವಿಶ್ವಾಸ ಗಳಿಸಬೇಕು ಎಂದು ಟೀಕಿಸಿದ ಅವರು, ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ವೈ. ಭರತ್ ಶೆಟ್ಟಿ, ಕಿಶೋರ್ ಕುಮಾರ್, ಪ್ರಮುಖರಾದ ವಸಂತ ಪೂಜಾರಿ, ವಿಕಾಸ್ ಪುತ್ತೂರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

