ಕಣಚೂರು ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಬಲವಂತ ಕರೆದೊಯ್ದ ಪ್ರಕರಣ: ವಯಸ್ಕ ಯುವತಿಯ ಸ್ವತಂತ್ರ ನಿರ್ಧಾರಕ್ಕೆ ಗೌರವ ಅಗತ್ಯ – ಪೊಲೀಸ್ ಆಯುಕ್ತರು

ಮಂಗಳೂರು: ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ವಾಹನದಲ್ಲಿ ಕರೆದೊಯ್ದ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಹತ್ವದ ಸ್ಪಷ್ಟನೆ ನೀಡಿದ್ದಾರೆ.

ಕಾಲೇಜಿನ ಆವರಣದಲ್ಲೇ ಕೆಲವರು ವಿದ್ಯಾರ್ಥಿನಿಯನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ವಾಹನಕ್ಕೆ ಹತ್ತಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ವಿದ್ಯಾರ್ಥಿನಿ ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆಕೆಯನ್ನು ಕುಟುಂಬದವರು ಬಲವಂತವಾಗಿ ಕರೆದೊಯ್ದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತರು, ಯುವತಿಯನ್ನು ಆಕೆಯ ಕುಟುಂಬದವರೇ ಬಲವಂತವಾಗಿ ಕರೆದೊಯ್ದಿರುವ ಆರೋಪವಿದ್ದು, ಇಂತಹ ಕೃತ್ಯ ಕಾನೂನುಬಾಹಿರವಾಗಿದೆ ಎಂದು ತಿಳಿಸಿದ್ದಾರೆ.

ಯುವತಿ ವಯಸ್ಕಳಾಗಿರುವುದರಿಂದ ತನ್ನ ವಾಸಸ್ಥಳ ಹಾಗೂ ಜೀವನದ ನಿರ್ಧಾರಗಳನ್ನು ಸ್ವತಂತ್ರವಾಗಿ ತೆಗೆದುಕೊಳ್ಳುವ ಹಕ್ಕು ಆಕೆಗಿದೆ. ಆಕೆಯ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಆಯ್ಕೆಯನ್ನು ಗೌರವಿಸಬೇಕು ಎಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

ಘಟನೆ ನಡೆದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರೆ, ವಾಹನವನ್ನು ದೂರ ಹೋಗುವ ಮುನ್ನವೇ ತಡೆದು ನಿಲ್ಲಿಸಲು ಸಾಧ್ಯವಾಗುತ್ತಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಸಂಬಂಧ ದೂರು ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವಯಸ್ಕ ಯುವತಿಯ ಸ್ವಾತಂತ್ರ್ಯ ಹಾಗೂ ಕಾನೂನುಬದ್ಧ ಹಕ್ಕುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!