ಮಂಗಳೂರು: ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್ ಅವರ ಸುಮಾರು 45 ವರ್ಷಗಳ ಸುದೀರ್ಘ ರಾಜಕೀಯ ಜೀವನ, ಸಮರ್ಪಣಾ ಮನೋಭಾವ, ಪ್ರಾಮಾಣಿಕತೆ ಹಾಗೂ ಸಂಘಟನಾ ಸಾಮರ್ಥ್ಯ ಅನುಕರಣೀಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಶ್ಲಾಘಿಸಿದರು.
ನಗರದ ಪುರಭವನದಲ್ಲಿ ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್ ಅವರಿಗೆ ಆಯೋಜಿಸಿದ್ದ ಸಾರ್ವಜನಿಕ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎನ್ಎಸ್ಯುಐನ ತಳಮಟ್ಟದ ಕಾರ್ಯಕರ್ತರಾಗಿ ರಾಜಕೀಯ ಜೀವನ ಆರಂಭಿಸಿದ ಸಲೀಂ ಅಹಮದ್, ರಾಜ್ಯಾಧ್ಯಕ್ಷರಾಗಿ, ಬಳಿಕ ರಾಷ್ಟ್ರೀಯ ಮಟ್ಟದಲ್ಲಿ ಸಂಘಟನೆಯ ಜವಾಬ್ದಾರಿ ನಿರ್ವಹಿಸಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎನ್ಎಸ್ಯುಐ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅವರ ಕಾರ್ಯವೈಖರಿಯನ್ನು ಹತ್ತಿರದಿಂದ ಗಮನಿಸಿದ್ದು, ಸಮರ್ಪಣೆ, ಬದ್ಧತೆ ಮತ್ತು ದಕ್ಷತೆಗೆ ನೂರಕ್ಕೆ ನೂರು ಅಂಕ ನೀಡಬಹುದು ಎಂದರು.

ರಾಜಕೀಯದಲ್ಲಿ ಅನೇಕರು ಕೆಲಸ ಮಾಡುತ್ತಾರೆ. ಆದರೆ ಸಮರ್ಪಣಾ ಮನೋಭಾವದಿಂದ ಸಾರ್ವಜನಿಕ ಜೀವನದಲ್ಲಿ ತೊಡಗಿಸಿಕೊಂಡು ಸಮಾಜಕ್ಕಾಗಿ ಏನಾದರೂ ಸಾಧಿಸಬೇಕೆಂಬ ಗುರಿ ಹೊಂದಿರುವವರು ಅಪರೂಪ. ದಕ್ಷಿಣ ಕನ್ನಡದ ಹೆಮ್ಮೆಯ ಸ್ವಾತಂತ್ರ್ಯ ಹೋರಾಟಗಾರ ಕಾರ್ನಾಡ್ ಸದಾಶಿವರಾವ್ ಅವರು ತಮ್ಮ ಅಪಾರ ಆಸ್ತಿಯನ್ನೇ ದೇಶಸೇವೆಗೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿ. ಇಂತಹ ಮಹನೀಯರು ಜನಿಸಿದ ನಾಡಿನಲ್ಲಿ ಸಾರ್ವಜನಿಕ ಜೀವನದಲ್ಲಿರುವವರು ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಅನೈತಿಕ ಚಟುವಟಿಕೆಗಳಿಂದ ದೂರವಿದ್ದು, ಲಂಚ ಮತ್ತು ಆಮಿಷಗಳಿಗೆ ಬಲಿಯಾಗದೆ ಆದರ್ಶ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಸಲೀಂ ಅಹಮದ್ ಮತ್ತು ಯು.ಟಿ. ಖಾದರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಎರಡು ಪ್ರಮುಖ ರಾಜಕೀಯ ನಕ್ಷತ್ರಗಳಿದ್ದಂತೆ. ಯು.ಟಿ. ಖಾದರ್ ಅವರು ಸಚಿವರಾಗಿ ವ್ಯವಸ್ಥಿತವಾಗಿ ಮತ್ತು ದಕ್ಷತೆಯಿಂದ ಕಾರ್ಯನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ, ರಾಜಕೀಯ ನಾಯಕತ್ವಕ್ಕೆ ಹಿರಿಯರು ಮಾರ್ಗದರ್ಶಕರಾಗಿ ಹಾಗೂ ಸಾಕ್ಷಿಪ್ರಜ್ಞೆಯಾಗಿ ಇರಬೇಕು. ಉತ್ತಮ ರಾಜಕೀಯ ಪರಂಪರೆಯನ್ನು ಬೆಳೆಸುವ ನಿಟ್ಟಿನಲ್ಲಿ ಟಿ.ಎಂ. ಶಾಹಿದ್ ತೆಕ್ಕಿಲ್ ಅವರ ನೇತೃತ್ವದ ಸಾರ್ವಜನಿಕ ಸನ್ಮಾನ ಸಮಿತಿ ಸಮಾಜಕ್ಕೆ ಮತ್ತು ರಾಜಕೀಯ ನಾಯಕತ್ವಕ್ಕೆ ಉತ್ತಮ ಸಂದೇಶ ನೀಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಲೀಂ ಅಹಮದ್ ಅವರ ಸಾರ್ವಜನಿಕ ಜೀವನ ಮತ್ತು ರಾಜಕೀಯ ಚಟುವಟಿಕೆಗಳ ಬಗ್ಗೆ ಅಪಾರ ಅಭಿಮಾನವಿದೆ. ಸುಮಾರು 45 ವರ್ಷಗಳ ರಾಜಕೀಯ ಪಯಣದಲ್ಲಿ ಅನೇಕ ಏಳುಬೀಳು, ಸವಾಲು ಹಾಗೂ ಅವಕಾಶಗಳನ್ನು ಎದುರಿಸಿದ್ದರೂ ತಾಳ್ಮೆ, ಸಹನೆ ಮತ್ತು ಸ್ಥಿರತೆಯನ್ನು ಕಾಯ್ದುಕೊಂಡಿರುವುದು ಅವರ ವ್ಯಕ್ತಿತ್ವದ ವಿಶೇಷತೆಯಾಗಿದೆ. ನಿರಂತರ ಪ್ರಯತ್ನ ಮತ್ತು ತಾಳ್ಮೆಯ ಮೂಲಕ ಅವರು ರಾಜಕೀಯ ಕ್ಷೇತ್ರದಲ್ಲಿ ವಿಶಿಷ್ಟ ಪರಂಪರೆಯನ್ನು ರೂಪಿಸಿಕೊಂಡಿದ್ದಾರೆ ಎಂದು ಪ್ರಶಂಸಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ , ಹಜ್ ಮತ್ತು ವಕ್ಫ್ ಸಚಿವರಾದ ಯು.ಟಿ. ಖಾದರ್, ಮಾಜಿ ಸಚಿವರಾದ ಬಿ. ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ಬಿ. ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ, ಸನ್ಮಾನ ಸಮಿತಿ ಅಧ್ಯಕ್ಷ ಟಿ.ಎಂ. ಶಾಹಿದ್ ತೆಕ್ಕಿಲ್, ಫಾ. ಫ್ರಾನ್ಸಿಸ್ ಝೇವಿಯರ್ ಗೋಮ್ಸ್, ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಕಾಂಗ್ರೆಸ್ನ ಸ್ಥಳೀಯ ಹಾಗೂ ಜಿಲ್ಲಾ ಮಟ್ಟದ ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

