ಮಂಗಳೂರು: ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ಯೆಗಳ ಕುರಿತು ಚರ್ಚಿಸಲು ವಿಶೇಷ ಆದ್ಯತೆ ನೀಡಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ತಿಳಿಸಿದ್ದಾರೆ.
ನಗರದ ಸರ್ಕ್ಯೂಟ್ ಹೌಸ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನವು ರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪರಿಣಾಮಕಾರಿ ವೇದಿಕೆಯಾಗಬೇಕು. ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಕ್ಷೇತ್ರ ಹಾಗೂ ಜಿಲ್ಲೆಗಳ ಸಮಸ್ಯೆಗಳನ್ನು ಸದನದಲ್ಲಿ ಪ್ರಸ್ತಾಪಿಸಬೇಕು ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ಯೆಗಳ ಕುರಿತು ಚರ್ಚಿಸಲು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ, ಮಂಜುನಾಥ ಭಂಡಾರಿ ಹಾಗೂ ಪಿ.ವಿ. ಮೋಹನ್ ಅವರು ಈಗಾಗಲೇ ಮನವಿ ಸಲ್ಲಿಸಿದ್ದಾರೆ. ಜಿಲ್ಲೆಯ ಜನರ ಪ್ರಮುಖ ಸಮಸ್ಯೆಗಳನ್ನು ಸದನದಲ್ಲಿ ಪ್ರಸ್ತಾಪಿಸಲು ಅಗತ್ಯ ಅವಕಾಶ ಕಲ್ಪಿಸಲಾಗುವುದು. ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕರಾಗಿ ಆಯ್ಕೆಯಾಗಿರುವ ಮಂಜುನಾಥ ಭಂಡಾರಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ವಿಧಾನ ಪರಿಷತ್ತಿನಲ್ಲಿ ಈವರೆಗೆ 839 ಪ್ರಶ್ನೆಗಳು ಸ್ವೀಕೃತವಾಗಿದ್ದು, 60 ಚುಕ್ಕೆ ಗುರುತಿನ ಹಾಗೂ 779 ಚುಕ್ಕೆ ರಹಿತ ಪ್ರಶ್ನೆಗಳಾಗಿವೆ. ನಿಯಮ 72ರಡಿ 22 ಗಮನ ಸೆಳೆಯುವ ಸೂಚನೆಗಳು ಹಾಗೂ ನಿಯಮ 330ರಡಿ 17 ಸೂಚನೆಗಳು ಸ್ವೀಕೃತವಾಗಿವೆ. ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗಗಳ ಸಮಸ್ಯೆಗಳಿಗೂ ಆದ್ಯತೆ ನೀಡಿ ಚರ್ಚೆಗೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಅಂಗವಿಕಲರ ಸಮಸ್ಯೆಗಳ ಕುರಿತು ವಿಶೇಷ ಚರ್ಚೆ ನಡೆಸಲಾಗುವುದು. ಸಾನಿಧ್ಯ ಟ್ರಸ್ಟ್ನ ಪ್ರತಿನಿಧಿಗಳು ಈ ಸಂಬಂಧ ಹಲವು ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದಾರೆ. ಅಂಗವಿಕಲರಿಗೆ ಸರ್ಕಾರದಿಂದ ದೊರೆಯಬೇಕಾದ ಸೌಲಭ್ಯಗಳು ಸಮರ್ಪಕವಾಗಿ ತಲುಪಬೇಕು. ರೈತರು, ಕಾರ್ಮಿಕರು ಸೇರಿದಂತೆ ವಿವಿಧ ವರ್ಗಗಳ ಸಮಸ್ಯೆಗಳ ಬಗ್ಗೆಯೂ ಸದನದಲ್ಲಿ ಚರ್ಚಿಸಲಾಗುವುದು ಎಂದರು.
ಮತಾಂತರ ನಿಷೇಧ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಗಳ ತಿದ್ದುಪಡಿ ವಿಧೇಯಕಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಯಾವ ವಿಧೇಯಕಗಳನ್ನು ಮಂಡಿಸಬೇಕು ಎಂಬುದನ್ನು ಸರ್ಕಾರ ನಿರ್ಧರಿಸುತ್ತದೆ. ವಿಧೇಯಕಗಳು ಸದನದಲ್ಲಿ ಮಂಡನೆಯಾದ ಬಳಿಕ ಅವುಗಳ ಕುರಿತು ಚರ್ಚಿಸುವುದು ಸದನದ ಜವಾಬ್ದಾರಿ. ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರಿಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸಂಪೂರ್ಣ ಅವಕಾಶವಿದೆ. ಸದನದಲ್ಲಿ ಚರ್ಚೆಗೆ ಅವಕಾಶ ಕಲ್ಪಿಸಿ ಸರ್ಕಾರದಿಂದ ಉತ್ತರ ಕೊಡಿಸುವುದು ಸಭಾಪತಿಯಾಗಿ ನಮ್ಮ ಕರ್ತವ್ಯ ಎಂದರು.
ಸದನದ ಕಲಾಪಗಳಿಗೆ ಅಡ್ಡಿಪಡಿಸುವ ಪ್ರವೃತ್ತಿ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರೆಲ್ಲರೂ ಜನರಿಂದ ಆಯ್ಕೆಯಾದ ಪ್ರತಿನಿಧಿಗಳು. ರಾಜ್ಯದ ಏಳು ಕೋಟಿ ಜನರಲ್ಲಿ ಕೇವಲ ಸುಮಾರು 300 ಮಂದಿಗೆ ಮಾತ್ರ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಸದಸ್ಯರಾಗುವ ಅವಕಾಶ ಸಿಗುತ್ತದೆ. ಇಂತಹ ಮಹತ್ವದ ಅವಕಾಶವನ್ನು ಜನರ ಸಮಸ್ಯೆಗಳ ಪರಿಹಾರಕ್ಕೆ ಬಳಸಿಕೊಳ್ಳಬೇಕು ಎಂದು ಎಲ್ಲ ಸದಸ್ಯರಲ್ಲಿ ಮನವಿ ಮಾಡಿದ್ದೇನೆ ಎಂದರು.
ಬೆಳಗಾವಿ ಅಧಿವೇಶನದಲ್ಲಿ ಹೆಚ್ಚಿನ ವಿಷಯಗಳ ಚರ್ಚೆಗೆ ಅವಕಾಶ ಕಲ್ಪಿಸಲಾಗುವುದು. ಅಗತ್ಯವಿದ್ದರೆ ತಡರಾತ್ರಿಯವರೆಗೂ ಕಲಾಪ ನಡೆಸುವ ಬಗ್ಗೆಯೂ ಚಿಂತನೆ ಇದೆ. ಕಲಾಪದ ಅವಧಿಯನ್ನು ಒಂದು ದಿನ ವಿಸ್ತರಿಸುವ ಕುರಿತು ಸರ್ಕಾರ ನಿರ್ಧಾರ ಕೈಗೊಳ್ಳಬಹುದು. ವರ್ಷಕ್ಕೆ ಕನಿಷ್ಠ 60 ದಿನಗಳಾದರೂ ಸದನ ನಡೆಯಬೇಕು ಎಂಬುದು ನನ್ನ ಆಶಯವಾಗಿದ್ದು, ಈ ಕುರಿತು ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ಹೇಳಿದರು.
ಆಶಾ ಕಾರ್ಯಕರ್ತೆಯರು ಹಾಗೂ ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆಯೂ ಸದನದಲ್ಲಿ ಚರ್ಚೆಗೆ ಅವಕಾಶ ನೀಡಲಾಗುವುದು. ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸಚಿವರು ಈಗಾಗಲೇ ಪ್ರತಿಕ್ರಿಯಿಸಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳು ಬೆಳಗಾವಿಯಲ್ಲಿ ಸಭೆ ನಡೆಸಿ ಚರ್ಚಿಸಿದ್ದಾರೆ. ಈ ಎರಡೂ ವಿಚಾರಗಳಲ್ಲಿ ಸರ್ಕಾರದಿಂದ ಸೂಕ್ತ ಉತ್ತರ ಪಡೆಯಲು ಪ್ರಯತ್ನಿಸಲಾಗುವುದು ಎಂದರು.

ಅಧಿವೇಶನದ ವೇಳೆ ಬೆಳಗಾವಿಯಲ್ಲಿ ವಿವಿಧ ಸಂಘಟನೆಗಳು ನಡೆಸುವ ಪ್ರತಿಭಟನೆಗಳ ಕುರಿತು ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆಗಳು ಸಹಜ. ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದಾಗ ಜನರು ಹೋರಾಟದ ಹಾದಿ ಹಿಡಿಯುತ್ತಾರೆ. ಕಳೆದ ಅಧಿವೇಶನದ ಸಂದರ್ಭದಲ್ಲಿ ಸುಮಾರು 70ರಿಂದ 80 ಪ್ರತಿಭಟನೆಗಳು ನಡೆದಿದ್ದವು. ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಲು ಸರ್ಕಾರ ಸಚಿವರನ್ನು ನಿಯೋಜಿಸಿತ್ತು. ಈ ಬಾರಿಯೂ ಪ್ರತಿಭಟನಾಕಾರರ ಅಹವಾಲುಗಳನ್ನು ಆಲಿಸಿ ಸದನದ ಗಮನಕ್ಕೆ ತರಲಾಗುವುದು. ಪ್ರತಿಭಟನೆಗಳನ್ನು ಹತ್ತಿಕ್ಕುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.
ಸಭಾಪತಿ ಸ್ಥಾನದಲ್ಲಿ ಪಕ್ಷಾತೀತವಾಗಿ ಕಾರ್ಯನಿರ್ವಹಿಸುವ ಕುರಿತು ಮಾತನಾಡಿದ ಅವರು, ಸಭಾಪತಿಯಾಗಿ ಆಯ್ಕೆಯಾದ ಬಳಿಕ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. 45 ವರ್ಷಗಳ ಕಾಲ ಪಕ್ಷದಲ್ಲಿ ದುಡಿದಿದ್ದರೂ ಸಭಾಪತಿ ಸ್ಥಾನ ಅಲಂಕರಿಸಿದ ಬಳಿಕ ಎಲ್ಲ ಸದಸ್ಯರಿಗೂ ಸಮಾನ ನ್ಯಾಯ ಒದಗಿಸುವುದು ನನ್ನ ಜವಾಬ್ದಾರಿ. ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರಿಗೆ ಸಮಾನ ಅವಕಾಶ ಕಲ್ಪಿಸಲಾಗುವುದು. ವಿಶೇಷವಾಗಿ ವಿರೋಧ ಪಕ್ಷದ ಸದಸ್ಯರಿಗೂ ತಮ್ಮ ಅಭಿಪ್ರಾಯ ಮಂಡಿಸಲು ಹೆಚ್ಚಿನ ಅವಕಾಶ ನೀಡುವ ಪ್ರಯತ್ನ ಮಾಡುತ್ತೇನೆ ಎಂದರು.
ಸಾರ್ವಜನಿಕ ಸನ್ಮಾನ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ಮುಖಂಡರು ಭಾಗವಹಿಸಿರುವ ಕುರಿತು ಕೇಳಿದ ಪ್ರಶ್ನೆಗೆ, ಸಾರ್ವಜನಿಕ ಕಾರ್ಯಕ್ರಮಗಳಿಗೆ ಆಹ್ವಾನಿಸುವುದು ಮತ್ತು ಭಾಗವಹಿಸುವುದು ಆಯೋಜಕರಿಗೆ ಬಿಟ್ಟ ವಿಚಾರ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಸೇರಿದಂತೆ ಹಲವು ಗಣ್ಯರು ಸನ್ಮಾನಿಸಿರುವುದು ಪ್ರೀತಿ ಮತ್ತು ಗೌರವದ ಸಂಕೇತವಾಗಿದೆ. ರಾಜ್ಯದ ಸುಮಾರು 20 ಜಿಲ್ಲೆಗಳಲ್ಲಿ ಸನ್ಮಾನ ಸ್ವೀಕರಿಸಿದ್ದೇನೆ. ಯಾವುದೇ ಪಕ್ಷದವರು ಸನ್ಮಾನಿಸಿದರೂ ಸ್ವೀಕರಿಸುತ್ತೇನೆ. ಆದರೆ, ಸಭಾಪತಿ ಸ್ಥಾನದ ಗೌರವಕ್ಕೆ ಚ್ಯುತಿ ಬರುವಂತಹ ಯಾವುದೇ ಕೆಲಸ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಬೆಳಗಾವಿ ಅಧಿವೇಶನ ಅರ್ಥಪೂರ್ಣವಾಗಿ ನಡೆಯಬೇಕು. ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಸದನವನ್ನು ಜನರ ಧ್ವನಿಯಾಗಿಸಬೇಕು ಎಂಬುದು ತಮ್ಮ ಆಶಯ ಎಂದು ಸಲೀಂ ಅಹ್ಮದ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹಾಗೂ ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ (ಸಚಿವ ಸ್ಥಾನಮಾನ) ಟಿ.ಎಂ. ಶಾಹಿದ್ ತೆಕ್ಕಿಲ್ ಉಪಸ್ಥಿತರಿದ್ದರು.

