ಟ್ಯಾಕ್ಸಿ ಬಂದ್ ಹಿಂಪಡೆತ: ಮಾಧ್ಯಮ ಮಿತ್ರರಿಗೆ ಆನಂದ್ ಕೆ. ಧನ್ಯವಾದ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಏಳು ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆಯ ಹಿನ್ನೆಲೆಯಲ್ಲಿ ನ.24ರಿಂದ ಎರಡೂ ಜಿಲ್ಲೆಗಳಲ್ಲಿ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಲು ನೀಡಿದ್ದ ಕರೆಯನ್ನು ಹಿಂಪಡೆಯಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಅಧ್ಯಕ್ಷ ಆನಂದ್ ಕೆ. ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಸಂಸದರು ಹಾಗೂ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಅದಾನಿ ಗ್ರೂಪ್‌ನ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಟ್ಯಾಕ್ಸಿ ಚಾಲಕರ ಕೆಲವು ಬೇಡಿಕೆಗಳಿಗೆ ಭಾಗಶಃ ಸ್ಪಂದನೆ ದೊರೆತಿದೆ. ಉಳಿದ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಈಡೇರಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಸ್ವಯಂಪ್ರೇರಿತವಾಗಿ ನಡೆಸಲು ಉದ್ದೇಶಿಸಿದ್ದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಟ್ಯಾಕ್ಸಿ ಬಂದ್ ಕರೆಯನ್ನು ಹಿಂಪಡೆಯಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕಳೆದ ಏಳು ದಿನಗಳಿಂದ ನಡೆದ ಧರಣಿ ಸತ್ಯಾಗ್ರಹಕ್ಕೆ ಮಾಧ್ಯಮದ ಮಿತ್ರರು ನೀಡಿದ ಸಹಕಾರಕ್ಕೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರತಿಭಟನೆಯ ಪ್ರತಿಯೊಂದು ಹಂತದ ಮಾಹಿತಿಯನ್ನು ಸಾರ್ವಜನಿಕರಿಗೆ ತಲುಪಿಸುವ ಮೂಲಕ ಮಾಧ್ಯಮದವರು ತಳಮಟ್ಟದ ಕಾರ್ಮಿಕ ವರ್ಗದ ಸಮಸ್ಯೆಗಳಿಗೆ ಧ್ವನಿಯಾಗಿದ್ದಾರೆ. ನಿರಂತರವಾಗಿ ಸುದ್ದಿಗಳನ್ನು ಪ್ರಕಟಿಸಿ, ಪ್ರತಿಭಟನೆಗೆ ಬೆಂಬಲ ನೀಡಿದ ದೃಶ್ಯ ಮತ್ತು ಮುದ್ರಣ ಮಾಧ್ಯಮದ ಪತ್ರಕರ್ತರಿಗೆ ಎರಡೂ ಜಿಲ್ಲೆಗಳ ಟ್ಯಾಕ್ಸಿ ಸಂಘಟನೆಗಳ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುವುದಾಗಿ ಆನಂದ್ ಕೆ. ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!