ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಅವರಿಗೆ ‘ಕರಾವಳಿ ಸಾಧಕ ರತ್ನ’ ಪ್ರಶಸ್ತಿ

ಮಂಗಳೂರು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕಾಸರಗೋಡು ವತಿಯಿಂದ ಆಯೋಜಿಸಲಾಗಿರುವ 9ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ–2026 ಹಾಗೂ ಕೇರಳ–ಕರ್ನಾಟಕ ಸಾಹಿತ್ಯ ಉತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಕನ್ನಡ ಭಾಷೆ, ನಾಡು-ನುಡಿ, ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳ ಬೆಳವಣಿಗೆಗೆ ಕೊಡುಗೆ ನೀಡುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಪ್ರತಿಷ್ಠಾನವು ಈ ಕಾರ್ಯಕ್ರಮವನ್ನು ಆಯೋಜಿಸಿದೆ. ಇದರ ಅಂಗವಾಗಿ ಬಸವಶ್ರೀ ಪ್ರಶಸ್ತಿ ಪುರಸ್ಕೃತ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರನ್ನು ಪ್ರತಿಷ್ಠಿತ ‘ಕರಾವಳಿ ಸಾಧಕ ರತ್ನ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ನವೆಂಬರ್ 28 ಮತ್ತು 29ರಂದು ಎರಡು ದಿನಗಳ ಕಾಲ ನಡೆಯಲಿರುವ ಕನ್ನಡ ಸಮ್ಮೇಳನದಲ್ಲಿ ನವೆಂಬರ್ 29ರಂದು ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಗೌರವ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಎಸ್. ಜಗದೀಶ್ಚಂದ್ರ ಅಂಚನ್ ಅವರು ಕಳೆದ 36 ವರ್ಷಗಳಿಂದ ಕ್ರೀಡಾ ಪತ್ರಿಕೋದ್ಯಮ ಮತ್ತು ಬರವಣಿಗೆಯಲ್ಲಿ ಸಕ್ರಿಯರಾಗಿದ್ದಾರೆ. ಈ ಅವಧಿಯಲ್ಲಿ 4,500ಕ್ಕೂ ಅಧಿಕ ಕ್ರೀಡಾ ಲೇಖನಗಳು ಹಾಗೂ ಅಂಕಣ ಬರಹಗಳನ್ನು ರಚಿಸಿದ್ದಾರೆ. ಇವರ ಬರಹಗಳು ಜಿಲ್ಲಾ, ರಾಜ್ಯ ಹಾಗೂ ಅಂತಾರಾಜ್ಯ ಮಟ್ಟದ ವಿವಿಧ ದಿನಪತ್ರಿಕೆಗಳು, ವಾರಪತ್ರಿಕೆಗಳು ಮತ್ತು ಮಾಸಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ಕ್ರೀಡಾ ಕ್ಷೇತ್ರದ ವಿವಿಧ ಆಯಾಮಗಳನ್ನು ವಿಶ್ಲೇಷಿಸುವ ವಿಮರ್ಶಾತ್ಮಕ ಬರಹಗಳ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಗುರುತನ್ನು ಮೂಡಿಸಿರುವ ಅಂಚನ್ ಅವರ ಸುದೀರ್ಘ ಸೇವೆ ಮತ್ತು ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!