ಮಂಗಳೂರು: ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ, ಮಂಗಳೂರು ಹಾಗೂ ಕೀರ್ತಿಶೇಷ ಕುಂಬ್ಳೆ ಸುಂದರ ರಾವ್ ಸಂಸ್ಮರಣಾ ಸಮಿತಿಯ ಜಂಟಿ ಆಶ್ರಯದಲ್ಲಿ, ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಯೋಗದೊಂದಿಗೆ ಕೀರ್ತಿಶೇಷ ಕುಂಬ್ಳೆ ಸುಂದರ ರಾವ್ ಸಂಸ್ಮರಣಾ ಕಾರ್ಯಕ್ರಮ ಹಾಗೂ ಸಂಸ್ಮರಣಾ ಪ್ರಶಸ್ತಿ ಪ್ರದಾನ ಸಮಾರಂಭವು ನವೆಂಬರ್ 30ರಂದು ಸಂಜೆ 4.30ಕ್ಕೆ ಮಂಗಳೂರಿನ ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಎರಿಕ್ ಮಥಾಯಿಸ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಮಿತಿಯ ಸಂಚಾಲಕ ಶಶಿರಾಜ್ ಕಾವೂರು ತಿಳಿಸಿದ್ದಾರೆ.

2024ರಲ್ಲಿ ಆರಂಭಗೊಂಡಿರುವ ಈ ಪ್ರಶಸ್ತಿಯನ್ನು ಮೊದಲ ವರ್ಷದಂದು ಹಿರಿಯ ಯಕ್ಷಗಾನ ಕಲಾವಿದ ಅರುವ ಕೊರಗಪ್ಪ ಶೆಟ್ಟಿ ಅವರಿಗೆ ಹಾಗೂ 2025ರಲ್ಲಿ ಪುತ್ತಿಗೆ ರಘುರಾಮ ಹೊಳ್ಳ ಅವರಿಗೆ ಪ್ರದಾನ ಮಾಡಲಾಗಿತ್ತು. ಪ್ರಸಕ್ತ ಸಾಲಿನ 2026ನೇ ವರ್ಷದ ಪ್ರಶಸ್ತಿಯನ್ನು ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ ಎನ್. ವಸಂತ ಗೌಡ ಕಾಯರ್ತಡ್ಕ ಅವರಿಗೆ ನೀಡಿ ಗೌರವಿಸಲಾಗುವುದು. ಪ್ರಶಸ್ತಿಯು ಸನ್ಮಾನ ಪತ್ರ, ಶಾಲು, ಹಾರ ಹಾಗೂ 25,000 ರೂ. ನಗದು ಬಹುಮಾನವನ್ನು ಒಳಗೊಂಡಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಡಾ. ನಾ. ದಾಮೋದರ ಶೆಟ್ಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶ್ರೀನಿವಾಸ ಜಿ. ಕಪ್ಪಣ್ಣ, ಅಗರಿ ಎಂಟರ್ಪ್ರೈಸಸ್ನ ಅಗರಿ ರಾಘವೇಂದ್ರ ರಾವ್, ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಡಾ. ದಿನೇಶ್ ನಾಯಕ್, ಕುಂಬ್ಳೆ ಸುಂದರ ರಾವ್ ಅವರ ಪುತ್ರ ಪ್ರಸನ್ನ ಕುಂಬ್ಳೆ, ಸಂಸ್ಮರಣಾ ಸಮಿತಿಯ ಸದಸ್ಯ ಕೆ. ಸತ್ಯನಾರಾಯಣ ಹಾಗೂ ಕೆನರಾ ಪದವಿಪೂರ್ವ ಕಾಲೇಜಿನ ಡೀನ್ ಗೋಪಾಲಕೃಷ್ಣ ಶೆಟ್ಟಿ ಭಾಗವಹಿಸಲಿದ್ದಾರೆ.

ಸಭಾ ಕಾರ್ಯಕ್ರಮದ ಬಳಿಕ ಸಂಜೆ 6ರಿಂದ ರಾತ್ರಿ 8ರವರೆಗೆ ಪ್ರಖ್ಯಾತ ಕಲಾವಿದರ ಕೂಡುವಿಕೆಯಲ್ಲಿ ‘ಭರತಾಗಮನ’ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.ತಾಳಮದ್ದಳೆಯ ಹಿಮ್ಮೇಳದಲ್ಲಿ ಪ್ರಸಿದ್ಧ ಭಾಗವತ ಸತೀಶ್ ಶೆಟ್ಟಿ ಬೋಂದೆಲ್ ಭಾಗವತರಾಗಿ, ವಿಶ್ವೇಶ್ ಬೋಳೂರು ಚೆಂಡೆ ಹಾಗೂ ಜಯರಾಮ ಆಚಾರ್ಯ ಚೇಳ್ಯಾರು ಮದ್ದಳೆಯಲ್ಲಿ ಸಹಕರಿಸಲಿದ್ದಾರೆ. ಮುಮ್ಮೇಳದಲ್ಲಿ ಹಿರಿಯ ಪ್ರಸಿದ್ಧ ಅರ್ಥಧಾರಿಗಳಾದ ಜಯಪ್ರಕಾಶ್ ಶೆಟ್ಟಿ ಪೆರ್ಮುದೆ, ಪನೆಯಾಲ ರವಿರಾಜ ಭಟ್, ಗಣೇಶ್ ಶೆಟ್ಟಿ ಕನ್ನಡಿಕಟ್ಟೆ ಹಾಗೂ ಹರಿರಾಜ್ ಶೆಟ್ಟಿಗಾರ್ ಕಿನ್ನಿಗೋಳಿ ಭಾಗವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ ಪ್ರಮುಖರಾದ ಗೋಪಾಲಕೃಷ್ಣ ಶೆಟ್ಟಿ, ಕರುಣಾಕರ ಶೆಟ್ಟಿ, ನಾಗೇಶ್ ಶೆಟ್ಟಿ ಬಜಾಲ್ ಹಾಗೂ ಸುರೇಶ್ ಬಟ್ಟೆ ಉಪಸ್ಥಿತರಿದ್ದರು.

