ಬ್ರಹ್ಮರಕೊಟ್ಲು ಟೋಲ್ ವಿರುದ್ಧ ಹೋರಾಟಗಾರರ ಮೇಲೆ ಪ್ರಕರಣ ದಾಖಲು ಖಂಡನೀಯ: ಅನ್ವರ್ ಸಾದತ್

ಮಂಗಳೂರು: ಬ್ರಹ್ಮರಕೊಟ್ಲು ಟೋಲ್ ಗೇಟ್ ವಿರುದ್ಧ ಹೋರಾಟ ನಡೆಸಿದ 30 ಮಂದಿ ಹೋರಾಟಗಾರರ ವಿರುದ್ಧ ಪ್ರಕರಣ ದಾಖಲಿಸಿರುವುದು ಖಂಡನೀಯ. ಜನರ ಹಕ್ಕುಗಳಿಗಾಗಿ ಧ್ವನಿ ಎತ್ತುವವರ ಮೇಲೆ ಪ್ರಕರಣ ದಾಖಲಿಸುವ ಮೂಲಕ ಬಂಟ್ವಾಳ ಪೊಲೀಸರು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಆರೋಪಿಸಿದ್ದಾರೆ.

ನಗರದ ಎಸ್ ಡಿ ಪಿ ಐ ಜಿಲ್ಲಾ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ವಳಾಲ್‌ನಲ್ಲಿ ಟೋಲ್ ಸಂಗ್ರಹ ಆರಂಭವಾದರೆ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸಲಾಗುವುದು ಎಂದು ಸಂಸದ ಬ್ರಿಜೇಶ್ ಚೌಟ ಭರವಸೆ ನೀಡಿದ್ದರು. ಆದರೆ, ಇದೀಗ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸದೆ ವಳಾಲ್‌ನಲ್ಲಿಯೂ ಟೋಲ್ ಸಂಗ್ರಹ ಆರಂಭಿಸಿರುವುದು ಸಂಸದರ ಮಾತಿಗೆ ವಿರುದ್ಧವಾಗಿದೆ ಎಂದು ಟೀಕಿಸಿದರು.

ಹೊಸ ಟೋಲ್ ಗೇಟ್ ಆರಂಭಿಸುವ ಮೊದಲು ಸಾರ್ವಜನಿಕರಿಗೆ ಸಮರ್ಪಕ ಮಾಹಿತಿ ನೀಡಬೇಕಿತ್ತು. ಹಳೆಯ ಟೋಲ್ ಗೇಟ್ ತೆರವುಗೊಳಿಸದೆ ಮತ್ತೊಂದು ಟೋಲ್ ಆರಂಭಿಸಿರುವುದು ಜನರಿಗೆ ಅನ್ಯಾಯ ಮಾಡಿದಂತಾಗಿದೆ. ಟೋಲ್ ವಿರುದ್ಧ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಸಾಂವಿಧಾನಿಕ ಹಕ್ಕಾಗಿದ್ದು, ಇಂತಹ ಹೋರಾಟದಲ್ಲಿ ಪಾಲ್ಗೊಂಡವರ ವಿರುದ್ಧ ಪ್ರಕರಣ ದಾಖಲಿಸಿರುವುದು ಸರಿಯಲ್ಲ ಎಂದು ಹೇಳಿದರು.

ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಲಾಗುವುದು. ಟೋಲ್ ಸಮಸ್ಯೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದರೂ ಸ್ಪಂದಿಸಬೇಕಾದ ರಾಜಕೀಯ ನಾಯಕರು ಮೌನ ವಹಿಸಿರುವುದು ದುರದೃಷ್ಟಕರ. ಬಿಜೆಪಿ ನಾಯಕರು ಟೋಲ್ ಸಮಸ್ಯೆ ಕುರಿತು ಧ್ವನಿ ಎತ್ತುವ ಬದಲು ಕೋಮು ವಿಚಾರಗಳಿಗೆ ಆದ್ಯತೆ ನೀಡುತ್ತಿದ್ದಾರೆ. ಕಾಂಗ್ರೆಸ್ ಶಾಸಕರಾದ ಯು.ಟಿ. ಖಾದರ್ ಮತ್ತು ಅಶೋಕ್ ರೈ ಕೂಡ ಈ ವಿಚಾರದಲ್ಲಿ ಧ್ವನಿ ಎತ್ತುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಂಬಳ, ಕೋಳಿ ಅಂಕ ಹಾಗೂ ಸಾಮಾಜಿಕ ಜಾಲತಾಣಗಳ ವಿಡಿಯೋಗಳಿಗೆ ಮಾತ್ರ ಸೀಮಿತವಾಗದೆ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಜನಪ್ರತಿನಿಧಿಗಳು ಮಾತನಾಡಬೇಕು ಎಂದು ಅನ್ವರ್ ಸಾದತ್ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎಸ್‌ಡಿಪಿಐ ಮಂಗಳೂರು ನಗರ ಜಿಲ್ಲಾ ಅಧ್ಯಕ್ಷ ಮಹಮ್ಮದ್ ಅಶ್ರಫ್ ಅಡ್ಡೂರು ಹಾಗೂ ಪಕ್ಷದ ಪ್ರಮುಖರಾದ ಶಾಹುಲ್ ಹೆಚ್.ಎಸ್. ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!