ಮಂಗಳೂರು: ಆಶಾ ಕಾರ್ಯಕರ್ತೆಯರ ಕುರಿತು ಸಚಿವ ಯು.ಟಿ. ಖಾದರ್ ನೀಡಿರುವ ಎನ್ನಲಾದ ಅವಮಾನಕಾರಿ ಹೇಳಿಕೆಯನ್ನು ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮಂಗಳೂರಿನಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಚಿವ ಯು.ಟಿ. ಖಾದರ್ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ವಾಟಾಳ್ ನಾಗರಾಜ್, ಅಧಿಕಾರದ ದರ್ಪ ತೋರಿಸುವುದನ್ನು ನಿಲ್ಲಿಸಿ ಎಂದು ಎಚ್ಚರಿಕೆ ನೀಡಿದ್ದಾರೆ.
“ಖಾದರ್ ಇದ್ದರೂ ರಾಜ್ಯ ನಡೆಯುತ್ತದೆ, ಇಲ್ಲದಿದ್ದರೂ ರಾಜ್ಯ ನಡೆಯುತ್ತದೆ. ನೀನು ಇಲ್ಲದಿದ್ದರೆ ರಾಜ್ಯ ಉದ್ಧಾರ ಆಗಲ್ವಾ? ನೀನು ಮತ್ತು ಡಿ.ಕೆ. ಶಿವಕುಮಾರ್ ಅವರಿಂದಲೇ ರಾಜ್ಯ ನಡೆಯುತ್ತಿದೆಯಾ?” ಎಂದು ಪ್ರಶ್ನಿಸಿದ್ದಾರೆ.

ಮಹಿಳೆಯರ ಬಗ್ಗೆ ಮಾತನಾಡುವಾಗ ಮಾನ-ಮರ್ಯಾದೆ ಇರಬೇಕು. ಮಾತನಾಡುವಾಗ ಜವಾಬ್ದಾರಿ ಇರಬೇಕು. ಸಿಎಂ ಆಗಿರಲಿ, ಸಚಿವರಾಗಿರಲಿ, ಯಾರೂ ದರ್ಪ ತೋರಿಸಬಾರದು. ಇಂದಿನಿಂದ ನಿಮ್ಮ ಹಳೆಯ ಚಾಳಿ ಮತ್ತು ದರ್ಪವನ್ನು ಬಿಟ್ಟುಬಿಡಿ. ಎಚ್ಚರಿಕೆ ನೀಡುತ್ತಿದ್ದೇನೆ ಎಂದು ಗುಡುಗಿದ್ದಾರೆ.
ಇದೇ ವೇಳೆ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ರಾಜ್ಯ ಸರ್ಕಾರ ಕೂಡಲೇ ಸ್ಪಂದಿಸಬೇಕು ಎಂದು ಆಗ್ರಹಿಸಿದ ವಾಟಾಳ್, ಮಹಿಳೆಯರ ಹೋರಾಟವನ್ನು ಕಡೆಗಣಿಸಿದರೆ ಅದು 2028ರ ವಿಧಾನಸಭಾ ಚುನಾವಣೆಯಲ್ಲಿ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದ್ದಾರೆ.
2028ರ ಚುನಾವಣೆಯಲ್ಲಿ ರಾಜ್ಯದಲ್ಲಿ ಬದಲಾವಣೆ ಖಚಿತ. ಸಾಮಾಜಿಕ ಜಾಲತಾಣಗಳಲ್ಲಿಯೂ ನನಗೆ ಸಾಕಷ್ಟು ಬೆಂಬಲ ವ್ಯಕ್ತವಾಗುತ್ತಿದೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯ ಸರ್ಕಾರದ ವಿರುದ್ಧ ಮತ್ತಷ್ಟು ಅಸಮಾಧಾನ ವ್ಯಕ್ತಪಡಿಸಿದ ಅವರು, ಜೈಲಿಗೆ ಹೋಗಬೇಕಾದವರಿಗೆ ಕ್ಲೀನ್ ಚಿಟ್ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ಇಲ್ಲ ಎಂಬ ವಿಚಾರವನ್ನೂ ಪ್ರಸ್ತಾಪಿಸಿದ್ದಾರೆ.
ಮಹಿಳೆಯರು ಹಾಗೂ ಯುವಜನತೆ ಎಚ್ಚರ ವಹಿಸಬೇಕು. ಆಶಾ ಕಾರ್ಯಕರ್ತೆಯರ ನ್ಯಾಯಯುತ ಹೋರಾಟಕ್ಕೆ ಸರ್ಕಾರ ಗೌರವ ನೀಡಿ, ಅವರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

