ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಖ್ಯಾತ ಹಾಗೂ ಹಿರಿಯ ಭಾಗವತ, ರಸ ರಾಗ ಚಕ್ರವರ್ತಿ ಬಿರುದಾಂಕಿತ ದಿನೇಶ್ ಅಮ್ಮಣ್ಣಾಯ( 65) ಅವರು ಇಂದು ನಿಧನರಾಗಿದ್ದಾರೆ. ದಾಮೋದರ ಮಂಡೆಚ್ಚರ ಶಿಷ್ಯರಾಗಿ ಪುತ್ತೂರು ಮೇಳದ ಮೂಲಕ ಕಲಾ ಜೀವನ ಆರಂಭಿಸಿದರು. ನಾಲ್ಕು ದಶಕಕ್ಕೂ ಹೆಚ್ಚು ಕಾಲ ಯಕ್ಷಗಾನ ರಂಗದಲ್ಲಿ ಭಾಗವತರಾಗಿ ಕಲಾ ಸೇವೆ ಸಲ್ಲಿಸಿದ್ದರು.
ತೆಂಕುತಿಟ್ಟಿನ ಪ್ರಸಿದ್ದ ಡೇರೆ ಮೇಳವಾಗಿದ್ದ ಕರ್ನಾಟಕ ಮೇಳದಲ್ಲಿ ಭಾಗವತರಾಗಿದ್ದ ಅವರು ದಿಗ್ಗಜ ಕಲಾವಿದರನ್ನು ರಂಗದಲ್ಲಿ ಕುಣಿಸಿದ ಕೀರ್ತಿ ಅಮ್ಮಣ್ಣಾಯರದ್ದು. ತುಳು ಪ್ರಸಂಗಗಳಿಗೆ ತನ್ನ ಕಂಠ ಮಾಧುರ್ಯದಿಂದ ಅಪಾರ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದರು. ಹೀಗಾಗಿ ಇವರಿಗೆ ‘ರಸರಾಗ ಚಕ್ರವರ್ತಿ’ ಎಂದು ಬಿರುದನ್ನು ನೀಡಲಾಗಿತ್ತು. ಅತ್ಯದ್ಭುತ ರಾಗ ಸಂಚಾರದ ಮೂಲಕ ಕರುಣಾ ರಸದ ಪದ್ಯಗಳಿಗೆ ಸಾಟಿಯಿಲ್ಲದ ಭಾಗವತ ಎನಿಸಿಕೊಂಡಿದ್ದರು. ಎಡನೀರು ಮೇಳದಲ್ಲೂ ತಿರುಗಾಟ ನಡೆಸಿದ್ದರು. ಕೆಲ ವರ್ಷಗಳಿಂದ ವಿಶ್ರಾಂತ ಜೀವನವನ್ನು ನಡೆಸುತ್ತಿದ್ದ ಅಮ್ಮಣ್ಣಾಯರು ಭಾಗವತರಾಗಿ ಅನೇಕ ವೇದಿಕೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು.
ಅತಿಥಿ ಭಾಗವತರಾಗಿ ಯಕ್ಷಗಾನ ಕಾರ್ಯಕ್ರಮಗಳ್ಲಿ ಭಾಗವಹಿಸುತ್ತಿದ್ದರು. ಎಡನೀರು ಮಠದ ಸ್ವಾಮೀಜಿಯವರ ಚಾತುರ್ಮಾಸ್ಯದಲ್ಲಿ ಈಚೆಗೆ ಕೊನೆಯದಾಗಿ ಭಾಗವತಿಕೆ ನಡೆಸಿದ್ದರು. ಎರಡು ತಿಂಗಳುಗಳಿಂದ ಅವರ ಆರೋಗ್ಯ ಹದಗೆಟ್ಟಿತ್ತು. ಇವರು ಪತ್ನಿ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.