ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ಜೂನ್ 15ರಿಂದ ‘ಪ್ರಿಯದರ್ಶಿನಿ’ ಯೋಜನೆ ಜಾರಿ

ತಿರುವನಂತಪುರ, ಜೂ.10: ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಮಹತ್ವಾಕಾಂಕ್ಷೆಯ ‘ಪ್ರಿಯದರ್ಶಿನಿ’ ಯೋಜನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಜೂನ್ 15ರಿಂದ ಯೋಜನೆ ಜಾರಿಗೆ ಬರಲಿದ್ದು, ಮೊದಲ ಹಂತದಲ್ಲಿ ಸಾಮಾನ್ಯ (ಆರ್ಡಿನರಿ) ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರ ಆರ್ಥಿಕ ಸಬಲೀಕರಣ ಮತ್ತು ಸಾರ್ವಜನಿಕ ಸಾರಿಗೆ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದರು.

ಮೊದಲ 100 ದಿನಗಳವರೆಗೆ ಕೆಎಸ್‌ಆರ್‌ಟಿಸಿಯ ಸಾಮಾನ್ಯ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ದೊರೆಯಲಿದೆ. ನಂತರ ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸಿ ಇತರ ಬಸ್‌ಗಳಲ್ಲಿಯೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಕುರಿತು ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ಹೇಳಿದರು.

ಯೋಜನೆಯಡಿ ಮಹಿಳೆಯರ ಆದಾಯ, ವಯಸ್ಸು ಅಥವಾ ಇತರೆ ಮಾನದಂಡಗಳನ್ನು ಪರಿಗಣಿಸದೆ ಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣದ ಸೌಲಭ್ಯ ಲಭ್ಯವಾಗಲಿದೆ. ಈ ಯೋಜನೆಯಿಂದ ಕೆಎಸ್‌ಆರ್‌ಟಿಸಿಗೆ ವಾರ್ಷಿಕ ಸುಮಾರು 800 ಕೋಟಿ ರೂ.ಗಳ ಹೆಚ್ಚುವರಿ ಹೊಣೆಗಾರಿಕೆ ಉಂಟಾಗಲಿದ್ದು, ಅದನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ರಾಜ್ಯದ ಮಹಿಳೆಯರಿಗೆ ಅನುಕೂಲವಾಗುವ ಈ ಯೋಜನೆ ಸಾರ್ವಜನಿಕ ಸಾರಿಗೆ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಲಿದೆ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!