ಇಡುಕ್ಕಿ: ಕೇರಳದಲ್ಲಿ ಸುರಿಯುತ್ತಿರುವ ನಿರಂತರ ಧಾರಾಕಾರ ಮಳೆಯಿಂದ ಪ್ರವಾಹ ಮತ್ತು ಭೂಕುಸಿತಗಳು ಉಂಟಾಗಿ ಇಡುಕ್ಕಿ ಹಾಗೂ ಕೊಟ್ಟಾಯಂ ಜಿಲ್ಲೆಗಳಲ್ಲಿ ಸಂಭವಿಸಿದ ಪ್ರತ್ಯೇಕ ದುರಂತಗಳಲ್ಲಿ ಮೂವರು ಮೃತಪಟ್ಟಿದ್ದಾರೆ. ಹಲವೆಡೆ ಭೂಕುಸಿತ ಸಂಭವಿಸಿದ್ದು, ಕೆಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಇಡುಕ್ಕಿಯ ಕುದಯತ್ತೂರು ಸಮೀಪದ ಆಡೂರ್ಮಾಲಾದಲ್ಲಿ ಭೂಕುಸಿತದಿಂದ ಸುಮತಿ ಮೃತಪಟ್ಟಿದ್ದು, ಅವರ ಪತಿ ಹಾಗೂ ಪುತ್ರ ಗಾಯಗೊಂಡಿದ್ದಾರೆ. ಕೊಟ್ಟಾಯಂ ಜಿಲ್ಲೆಯ ಪೂಂಜಾರ್ನಲ್ಲಿ ಸಂಭವಿಸಿದ ಮತ್ತೊಂದು ಭೂಕುಸಿತದಲ್ಲಿ ಜೋಸೆಫ್ ಮೃತಪಟ್ಟಿದ್ದು, ಅವರ ತಾಯಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ವಗಮೋನ್ನಲ್ಲಿ ಮನೆ ಮೇಲೆ ಭೂಕುಸಿತ ಸಂಭವಿಸಿ ಪ್ರಭಾಕರನ್ ನಾಯರ್ ಮೃತಪಟ್ಟಿದ್ದಾರೆ.

ಭಾರೀ ಮಳೆಯಿಂದ ಇಡುಕ್ಕಿ, ಪಥನಂತಿಟ್ಟ, ಕೊಟ್ಟಾಯಂ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಪಂಪಾ ಸೇರಿದಂತೆ ಹಲವು ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ತಗ್ಗು ಪ್ರದೇಶಗಳ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಹಲವು ರಸ್ತೆಗಳು ಜಲಾವೃತಗೊಂಡಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಸಣ್ಣ ಅಣೆಕಟ್ಟುಗಳ ಶಟರ್ಗಳನ್ನು ತೆರೆಯಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ಭೂಕುಸಿತ ಮತ್ತು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಎನ್ಡಿಆರ್ಎಫ್, ಅಗ್ನಿಶಾಮಕ ದಳ, ಪೊಲೀಸ್ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕೋಝಿಕ್ಕೋಡ್ನಲ್ಲಿ ಅಲೆಗಳಲ್ಲಿ ಸಿಲುಕಿದ್ದ ಮೀನುಗಾರಿಕಾ ದೋಣಿಯಲ್ಲಿದ್ದ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ (IMD) ಪಥನಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಮಲಪ್ಪುರಂ, ಕೋಝಿಕ್ಕೋಡ್, ವಯನಾಡು, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಎರ್ನಾಕುಲಂ, ತ್ರಿಶೂರ್ ಮತ್ತು ಪಾಲಕ್ಕಾಡ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಸಾರ್ವಜನಿಕರು ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

