ಮಂಜೇಶ್ವರ: ಆರಿಕ್ಕಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾನುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ.ಮೃತ ಯುವಕನನ್ನು ಪಚ್ಚಂಬಳ ನಿವಾಸಿ ಹಾಗೂ ಉಪ್ಪಳದ ಆಟೋ ಚಾಲಕ ಬದರುಲ್ ಮುನೀರ್ ಎಂದು ಗುರುತಿಸಲಾಗಿದೆ. ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಡಿಕ್ಕಿಯಿಂದ ಅಪಘಾತ ಸಂಭವಿಸಿದ್ದು, ಬದರುಲ್ ಮುನೀರ್ ಸ್ಕೂಟರ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಅಪಘಾತದ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಮಂಗಲ್ಪಾಡಿ ಆಸ್ಪತ್ರೆಗೆ ದಾಖಲಿಸಿದರು. ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆ.
ಈ ಸಂಬಂಧ ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.