ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿಯ ಬಂದ್ಯೋಡು ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ತಲಪಾಡಿ ಸಮೀಪದ ಕೆ. ಸಿ. ರೋಡ್ ನಿವಾಸಿ ಮುಹ್ಯುದ್ದೀನ್ ನಿಸಾನ್ (28) ಸಾವನ್ನಪ್ಪಿದ ದುರ್ದೈವಿ.
ಮಂಗಳವಾರ ಬೆಳಿಗ್ಗೆ ಈ ಅಪಘಾತ ಸಂಭವಿಸಿದೆ. ಬಂದ್ಯೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾಂತ್ರಿಕ ದೋಷದಿಂದ ಕೆಟ್ಟು ನಿಂತಿದ್ದ ಲಾರಿಯ ಹಿಂಭಾಗಕ್ಕೆ ನಿಸಾನ್ ಚಲಾಯಿಸುತ್ತಿದ್ದ ಬೈಕ್ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಿಸಾನ್ ಗಂಭೀರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ.
ಪ್ರಸ್ತುತ ರಾಷ್ಟ್ರೀಯ ಹೆದ್ದಾರಿಯ ಕೆಲವು ಭಾಗಗಳಲ್ಲಿ ಬೈಕ್ ಸಂಚಾರಕ್ಕೆ ನಿರ್ಬಂಧ ಹೇರಲಾಗಿದ್ದರೂ, ಅನೇಕ ಸವಾರರು ಈ ನಿಯಮವನ್ನು ಉಲ್ಲಂಘಿಸಿ ವಾಹನ ಚಲಾಯಿಸುತ್ತಿದ್ದಾರೆ. ಇಂತಹ ನಿಯಮಬಾಹಿರ ಚಾಲನೆಯೇ ಇತ್ತೀಚಿನ ಸರಣಿ ಅಪಘಾತಗಳಿಗೆ ಪ್ರಮುಖ ಕಾರಣವಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.