ಕಾಸರಗೋಡು: ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 43 ಗ್ರಾಂ ಎಂಡಿಎಂಎ ಮಾದಕ ವಸ್ತುವಿನೊಂದಿಗೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕಾಸರಗೋಡು ಜಿಲ್ಲೆಯ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಿ.ಎ. ಮೊಹಮ್ಮದ್ ಸಹಲ್, ಎರ್ನಾಕುಲಂ edws ಜಿಲ್ಲೆಯ ನಾರ್ತ್ ಪರವೂರು ಪೊಲೀಸ್ ಠಾಣೆ ವ್ಯಾಪ್ತಿಯ ಅರುಣ್ ಕುಮಾರ್ ಹಾಗೂ ವಡಕರಾ ಪೊಲೀಸ್ ಠಾಣೆ ವ್ಯಾಪ್ತಿಯ ಎಂ.ಪಿ. ಅನುಷ್ ಎಂ ಎಂದು ಗುರುತಿಸಲಾಗಿದೆ.
ಸೋಮವಾರ ಬೆಳಿಗ್ಗೆ ಸುಮಾರು 7.30ರ ವೇಳೆಗೆ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಪಾವೂರಿನಲ್ಲಿ ಸ್ವಿಫ್ಟ್ ಕಾರಿನಲ್ಲಿ ಸಾಗಿಸುತ್ತಿದ್ದ ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ವಿ. ವಿಜಯ್ ಭರತ್ ರೆಡ್ಡಿ ಅವರಿಗೆ ದೊರೆತ ರಹಸ್ಯ ಮಾಹಿತಿಯ ಆಧಾರದಲ್ಲಿ ಮಂಜೇಶ್ವರ ಪೊಲೀಸರು ಹಾಗೂ ಡ್ಯಾನ್ಸಾಫ್ ತಂಡ ಸಂಯುಕ್ತವಾಗಿ ವಾಹನ ತಪಾಸಣೆ ನಡೆಸಿದರು. ತಪಾಸಣೆ ವೇಳೆ ಕಾರಿನೊಳಗಿನಿಂದ 43 ಗ್ರಾಂ ಎಂಡಿಎಂಎ ಪತ್ತೆಯಾಯಿತು. ತಕ್ಷಣ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿಗಳು ಈ ಮಾದಕ ವಸ್ತುವನ್ನು ಬೆಂಗಳೂರಿನಿಂದ ತಂದಿರುವುದಾಗಿ ಒಪ್ಪಿಕೊಂಡಿದ್ದಾರೆ. ಮಾದಕ ವಸ್ತು ಸಾಗಾಟಕ್ಕೆ ಬಳಸಿದ ಕಾರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ