ಅಡೂರಿನಲ್ಲಿ ಮಣ್ಣುಕುಸಿತ ದುರಂತ: ಇಬ್ಬರು ಬಾಲಕರ ಜೀವಬಲಿ

ಕಾಸರಗೋಡು, ಜೂನ್ 8: ಆದೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಡೂರು ಸಮೀಪದ ಸಂಚಕ್ಕಡವು ಪ್ರದೇಶದಲ್ಲಿ ಸಂಭವಿಸಿದ ಭೀಕರ ಮಣ್ಣುಕುಸಿತ ದುರಂತದಲ್ಲಿ ಇಬ್ಬರು ಬಾಲಕರು ಸಾವನ್ನಪ್ಪಿದ್ದು, ಮತ್ತೋರ್ವ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ನಡೆದಿದೆ.

ಸಾವನ್ನಪ್ಪಿದವರನ್ನು ಅಬೂಬಕ್ಕರ್ ಅವರ ಪುತ್ರರಾದ ಮುನ್ಸೀರ್ (10) ಹಾಗೂ ಮುಜಮ್ಮಿಲ್ (14) ಎಂದು ಗುರುತಿಸಲಾಗಿದೆ. ಗಾಯಗೊಂಡ ಬಾಲಕನನ್ನು ತಕ್ಷಣವೇ ಚೆಂಗಳ ಇಂದಿರಾನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಇತ್ತೀಚೆಗೆ ಗೃಹಪ್ರವೇಶ ನಡೆದ ಮನೆಯ ಸಮೀಪ ಬಾಲಕರು ಆಟವಾಡುತ್ತಿದ್ದ ವೇಳೆ ಏಕಾಏಕಿ ಮಣ್ಣಿನ ದಿಬ್ಬ ಕುಸಿದು ಅವರ ಮೇಲೆ ಬಿದ್ದಿದೆ. ಪರಿಣಾಮ ಇಬ್ಬರು ಬಾಲಕರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಆದೂರು ಪೊಲೀಸರು ಹಾಗೂ ಸ್ಥಳೀಯ ನಿವಾಸಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಮಣ್ಣಿನಡಿ ಸಿಲುಕಿದ್ದ ಬಾಲಕರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಇಬ್ಬರ ಜೀವ ಉಳಿಸಲು ಸಾಧ್ಯವಾಗಲಿಲ್ಲ.

ಈ ದುರ್ಘಟನೆ ಪ್ರದೇಶದಲ್ಲಿ ತೀವ್ರ ಶೋಕದ ವಾತಾವರಣ ಸೃಷ್ಟಿಸಿದ್ದು, ಮೃತ ಬಾಲಕರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಮಣ್ಣುಕುಸಿತಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಅಧಿಕಾರಿಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!