ಕಾಸರಗೋಡು : ಜಿಲ್ಲೆಯಲ್ಲಿ ಸೋಮವಾರ ಸಂಜೆ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ದುರ್ಮರಣವನ್ನಪ್ಪಿದ್ದಾರೆ.
ಮೊದಲನೆಯ ಘಟನೆಯು ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಿಯ ಸೇತುವೆ ಬಳಿ ನಡೆದಿದೆ. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ, ಉದುಮ ಪಾಕ್ಯಾರ ನಿವಾಸಿ ಪ್ರಜೀಶ್ (26) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜೊತೆಗಿದ್ದ ಅಮೀನ್ (25) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮತ್ತೊಂದು ಘಟನೆಯು ವಿದ್ಯಾನಗರದ ನಾಯನ್ಮಾರ್ ಮೂಲದಲ್ಲಿ ಸಂಭವಿಸಿದೆ. ಬೈಕ್ನಲ್ಲಿ ತೆರಳುತ್ತಿದ್ದ ಆಲಂಪಾಡಿ ನಿವಾಸಿ ರಫೀಕ್ (45) ಅವರು ಚರ್ಕಳ ಕಡೆಗೆ ಹೋಗುತ್ತಿದ್ದ ಮೀನಿನ ಲಾರಿಗೆ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.