ಕಾಸರಗೋಡು ಜಿಲ್ಲೆಯಲ್ಲಿ ಖಾಸಗಿ ಬಸ್ ಮುಷ್ಕರ ಸಂಪೂರ್ಣ; ಪ್ರಯಾಣಿಕರು ಸಂಕಷ್ಟದಲ್ಲಿ

ಕಾಸರಗೋಡು: ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿರುವುದರಿಂದ ಖಾಸಗಿ ಬಸ್‌ಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ ಎಂದು ಆರೋಪಿಸಿ, ಸೂಕ್ತ ಪರಿಹಾರ ಕೈಗೊಳ್ಳಬೇಂದು ಆಗ್ರಹಿಸಿ ಕಾಸರಗೋಡು ಜಿಲ್ಲೆಯ ಖಾಸಗಿ ಬಸ್‌ಗಳು ಇಂದು ಸಂಪೂರ್ಣ ಸೇವೆ ಸ್ಥಗಿತಗೊಳಿಸಿವೆ.

ಜಿಲ್ಲೆಯ ಖಾಸಗಿ ಬಸ್ ಮಾಲೀಕರು, ಸಿಬ್ಬಂದಿ ಹಾಗೂ ಅವರ ಕುಟುಂಬ ಸದಸ್ಯರು ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಅಣಂಗೂರಿನಿಂದ ಆರಂಭವಾದ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿಗೆ ತಲುಪಿ ಧರಣಿ ನಡೆಸಿದರು.

ಈ ಮುಷ್ಕರದಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮಹಿಳೆಯರನ್ನು ಹೊರತುಪಡಿಸಿ ಉಳಿದ ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಸೀಟ್ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ ಆಟೋ ರಿಕ್ಷಾ ದರ ಏರಿಕೆಯಿಂದ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ಜಾರಿಯಾದ ಬಳಿಕ ಖಾಸಗಿ ಬಸ್‌ಗಳಿಗೆ ಇಂಧನ ಖರೀದಿಸುವುದಕ್ಕೂ ಸಾಧ್ಯವಾಗದಷ್ಟು ಆದಾಯ ಕುಸಿದಿದೆ ಎಂದು ಬಸ್ ಮಾಲೀಕರು ಆರೋಪಿಸಿದ್ದಾರೆ.
ಜಿಲ್ಲೆಯಲ್ಲಿ ಖಾಸಗಿ ಬಸ್ ಮುಷ್ಕರ ಸಂಪೂರ್ಣ ಯಶಸ್ವಿಯಾಗಿದ್ದರೂ, ಜಿಲ್ಲೆಯ ಉತ್ತರ ಗಡಿಯಾದ ಹೊಸಂಗಡಿಯಿಂದ ಮಂಗಳೂರು ಕಡೆಗೆ ಕರ್ನಾಟಕದ ಖಾಸಗಿ ಬಸ್‌ಗಳು ಎಂದಿನಂತೆ ಸಂಚರಿಸುತ್ತಿವೆ. ಈ ಬಸ್‌ಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದೆ ಎಂದು ವರದಿಯಾಗಿದೆ.

ಇದೇ ವೇಳೆ, ಮಂಜೇಶ್ವರ ತಾಲೂಕಿನ ಹೊಸಂಗಡಿಯಿಂದ ಆನೆಕ್ಕಲ್ಲು ಕಡೆಗೆ ತೆರಳಲು ಪ್ರಯಾಣಿಕರು ಬಸ್‌ಗಾಗಿ ಗುಂಪುಗೂಡಿ ಕಾಯುತ್ತಿರುವ ದೃಶ್ಯಗಳು ಕಂಡುಬಂದಿವೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!