ಕಾಸರಗೋಡು, ಜು. 15: ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಪರಿಗಣಿಸಿ ದಾರವಾಡ–ಹುಬ್ಬಳ್ಳಿಯ ಸಮಾಜ ಸೇವಾ ನಿರತೆ ಸಂಜನಾ ಕುಲಿಗೋಡ ಅವರಿಗೆ ಪ್ರತಿಷ್ಠಿತ ಅಂತರ್ ರಾಜ್ಯ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026’ ಘೋಷಿಸಲಾಗಿದೆ.

ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ರಜತ ಸಂಭ್ರಮ ಸಮಾರೋಪದ ಅಂಗವಾಗಿ ನಡೆಯಲಿರುವ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಮತ್ತು ಕೇರಳ ರಾಜ್ಯಗಳ ನಡುವಿನ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಸಮಾಜಮುಖಿ ಸೇವೆಯಲ್ಲಿ ವಿಶೇಷ ಸಾಧನೆಗೈದ ಗಣ್ಯರನ್ನು ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಈ ಸಾಲಿನ ಪುರಸ್ಕೃತರಾಗಿ ಸಂಜನಾ ಕುಲಿಗೋಡ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

