ಕಾಸರಗೋಡು, ಜು. 24: ಗಡಿನಾಡಿನ ಕನ್ನಡ ಸಾಹಿತ್ಯ, ಸಂಸ್ಕೃತಿ ಹಾಗೂ ಸಾಧಕರನ್ನು ಗೌರವಿಸುವ ಉದ್ದೇಶದಿಂದ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ-2026ನ್ನು ಜುಲೈ 27ರಂದು ಕಾಸರಗೋಡಿನ ನುಳ್ಳಿಪ್ಪಾಡಿಯಲ್ಲಿರುವ ಕನ್ನಡ ಭವನದಲ್ಲಿ ಅದ್ದೂರಿಯಾಗಿ ಆಯೋಜಿಸಲಾಗಿದೆ.

ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಡಾ. ಸಿ. ಸೋಮಶೇಖರ್ ವಹಿಸಲಿದ್ದು, ಬೆಳಿಗ್ಗೆ 9 ಗಂಟೆಯಿಂದ ದಿನಪೂರ್ತಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಕಲಾಮೇಳ ಉದ್ಘಾಟನೆ, ದೀಪ ಪ್ರಜ್ವಲನೆ, ಆಶೀರ್ವಚನ, ಕನ್ನಡ ಧ್ವಜಾರೋಹಣ, ಭಾವಚಿತ್ರಗಳಿಗೆ ಪುಷ್ಪನಮನ ಸೇರಿದಂತೆ ಹಲವು ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಕಾರ್ಯಕ್ರಮಗಳು ಜರುಗಲಿವೆ.

ಈ ಸಂದರ್ಭದಲ್ಲಿ ‘ಭರವಸೆಯ ಬೆಳಕು’ ವಿದ್ಯಾರ್ಥಿ ಸಾಧನಾ ಪ್ರಶಸ್ತಿ, ಶಿಕ್ಷಣ ರತ್ನ ಪ್ರಶಸ್ತಿ, ರಾಷ್ಟ್ರಕವಿ ಗೋವಿಂದ ಪೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ, ರಾಜಶ್ರೀ ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ, ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ, ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್, ಸಮಾಜ ಸೇವಾರತ್ನ-2026 ಸೇರಿದಂತೆ ವಿವಿಧ ಪ್ರಶಸ್ತಿಗಳನ್ನು ಸಾಧಕರಿಗೆ ಪ್ರದಾನ ಮಾಡಲಾಗುತ್ತದೆ.

ಇದಲ್ಲದೆ ಭಜನಾ ಸಂಕೀರ್ತನೆ, ಹೋಮ, ಪ್ರಾರ್ಥನೆ ಸೇರಿದಂತೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಗಣ್ಯರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.


