ಖ್ಯಾತ ಕವಿ ಗುಣಾಜೆ ರಾಮಚಂದ್ರ ಭಟ್ ಅವರಿಗೆ ಕಾಸರಗೋಡು ದಸರಾ ಕವಿಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ

ಕಾಸರಗೋಡು: ಖ್ಯಾತ ಕವಿ, ಸಾಹಿತಿ ಗುಣಾಜೆ ರಾಮಚಂದ್ರ ಭಟ್ ಅವರು ಕಾಸರಗೋಡು ದಸರಾ ಕವಿಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ–2026ಕ್ಕೆ ಆಯ್ಕೆಯಾಗಿದ್ದಾರೆ.

ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಅವರ ಸಾರಥ್ಯದಲ್ಲಿ ಅ.11ರಿಂದ 20ರವರೆಗೆ ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ನಡೆಯಲಿರುವ ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ–2026ರ ಅಂಗವಾಗಿ ಅ.18ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ಕಾಸರಗೋಡು ದಸರಾ ಕವಿ ಸಮ್ಮೇಳನದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು.

ಸಾಹಿತ್ಯ ಸಂಘಟಕ ಬಿ. ಶ್ರೀನಿವಾಸ್ ಬಹದ್ದೂರ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ಕವಿ ಸಮ್ಮೇಳನವನ್ನು ಚುಟುಕು ಬ್ರಹ್ಮ, ಚುಟುಕು ಸಾಹಿತ್ಯ ಪರಿಷತ್ ಸಂಸ್ಥಾಪಕ ಡಾ. ಎಂ.ಜಿ.ಆರ್. ಅರಸ್ (ಮೈಸೂರು) ಉದ್ಘಾಟಿಸಲಿದ್ದಾರೆ. ಮೈಸೂರಿನ ಖ್ಯಾತ ಕವಿ, ಸಾಹಿತ್ಯರತ್ನ ಜಯಪ್ಪ ಹೊನ್ನಾಳಿ (ಜಯಕವಿ ಮೈಸೂರು) ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ.

ರಾಷ್ಟ್ರಮಟ್ಟದ 75 ಮಂದಿ ಕವಿಗಳು ಭಾಗವಹಿಸಲಿರುವ ಸಮ್ಮೇಳನದಲ್ಲಿ 21 ಮಂದಿ ಕವಿಗಳಿಗೆ ಕಾಸರಗೋಡು ದಸರಾ ಕವಿಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ–2026 ನೀಡಿ ಗೌರವಿಸಲಾಗುವುದು ಎಂದು ಕಾಸರಗೋಡು ದಸರಾ ಸಂಚಾಲಕ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಮತ್ತು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನದ ಸಾಂಸ್ಕೃತಿಕ ಘಟಕದ ಅಧ್ಯಕ್ಷ ಪಾಂಗೋಡು ಪ್ರವೀಣ್ ನಾಯಕ್ ಅವರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!