ಕನಿಲದಲ್ಲಿ ಮೇಲ್ಸೇತುವೆ ಕಾಮಗಾರಿ ಆರಂಭ – ಕ್ಷೇತ್ರದ ಆಡಳಿತ ಸಮಿತಿಯಿಂದ ಕೃತಜ್ಞತೆ
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾದಚಾರಿಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಕಾಸರಗೋಡು ಜಿಲ್ಲೆಯ ವಿವಿಧ 12 ಸ್ಥಳಗಳಲ್ಲಿ ಪಾದಚಾರಿ ಮೇಲ್ಸೇತುವೆಗಳ ನಿರ್ಮಾಣ ಕಾಮಗಾರಿಗೆ ಚಾಲನೆ ದೊರೆತಿದೆ. ಈ ಪೈಕಿ ಕನಿಲ ಕ್ಷೇತ್ರದ ಬಳಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಇಂದು ಆರಂಭಗೊಂಡಿದೆ.


ಗೋವಿಂದ ಪೈ ಕಾಲೇಜು, ಮಾಡ, ಕನಿಲ, ಐಲ, ಶಿರಿಯಾ, ಅರಿಕ್ಕಾಡಿ, ಮೊಗ್ರಾಲ್ ಪುತ್ತೂರು, ಸಿಪಿಸಿಆರ್ಐ, ಅಡ್ಕತ್ತಬೈಲ್, ನುಳ್ಳಿಪ್ಪಾಡಿ, ಇಂದಿರಾ ನಗರ ಹಾಗೂ ಕಲ್ಯಾಣ್ ರೋಡ್ ಸೇರಿದಂತೆ ಒಟ್ಟು 12 ಸ್ಥಳಗಳಲ್ಲಿ ಪಾದಚಾರಿ ಮೇಲ್ಸೇತುವೆಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ.

ಕನಿಲ ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳು ಹಾಗೂ ವಿದ್ಯಾರ್ಥಿಗಳು ರಾಷ್ಟ್ರೀಯ ಹೆದ್ದಾರಿಯನ್ನು ದಾಟುವ ಸಂದರ್ಭದಲ್ಲಿ ಎದುರಿಸುತ್ತಿದ್ದ ತೊಂದರೆಗಳಿಗೆ ಮೇಲ್ಸೇತುವೆ ನಿರ್ಮಾಣದಿಂದ ಪರಿಹಾರ ದೊರೆಯುವ ನಿರೀಕ್ಷೆಯಿದೆ.

ಈ ಕುರಿತು ಪ್ರತಿಕ್ರಿಯಿಸಿದ ಕನಿಲ ಕ್ಷೇತ್ರದ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಕಡಪ್ಪುರ ಅವರು, “ಕನಿಲದಲ್ಲಿ ಮೇಲ್ಸೇತುವೆ ನಿರ್ಮಾಣವಾಗಬೇಕು ಎಂಬುದು ನಮ್ಮ ಕ್ಷೇತ್ರದ ಬಹುದಿನಗಳ ಬೇಡಿಕೆಯಾಗಿತ್ತು. ಇಲ್ಲಿಗೆ ಆಗಮಿಸುವ ಭಕ್ತಾದಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ರಸ್ತೆ ದಾಟುವುದು ಬಹಳ ಕಷ್ಟಕರವಾಗಿತ್ತು. ಇದೀಗ ಮೇಲ್ಸೇತುವೆ ಕಾಮಗಾರಿ ಆರಂಭವಾಗಿರುವುದರಿಂದ ನಮ್ಮ ಬೇಡಿಕೆಗೆ ಸ್ಪಂದನೆ ದೊರೆತಂತಾಗಿದೆ. ಇದಕ್ಕಾಗಿ ಶ್ರಮಿಸಿದ ಬಿಜೆಪಿ ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್. ಹಾಗೂ ವಿಜಯ್ ರೈ ಅವರಿಗೆ ಕನಿಲ ಕ್ಷೇತ್ರದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇವೆ,” ಎಂದು ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾದಚಾರಿಗಳ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಮೇಲ್ಸೇತುವೆಗಳ ನಿರ್ಮಾಣ ಮಹತ್ವದ ಹೆಜ್ಜೆಯಾಗಿದ್ದು, ಕನಿಲ ಭಾಗದ ಭಕ್ತಾದಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಇದರಿಂದ ಹೆಚ್ಚಿನ ಅನುಕೂಲವಾಗುವ ನಿರೀಕ್ಷೆಯಿದೆ.

