ಶಬರಿಮಲೆ : ಕರ್ನಾಟಕದ ಶಬರಿಮಲೆ ಯಾತ್ರಿಕರಿಗೆ ಮಿದುಳು ತಿನ್ನುವ ಅಮೀಬಾ ಕುರಿತು ಮುನ್ನೆಚ್ಚರಿಕೆ ವಹಿಸಲು ಸುರಕ್ಷತಾ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.
ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿನಿಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ ಶಬರಿಮಲೆ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ/ ಸುರಕ್ಷಿತಾ ಕ್ರಮಗಳನ್ನು ಪಾಲಿಸುವಂತೆ ಸಲಹೆ ನೀಡಲಾಗಿದೆ.
ನೇಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ.
ನೇಗ್ಲೇರಿಯಾ ಫೌಲೇರಿ ಅತ್ಯಂತ ವಿಷಕಾರಿ ಸೂಕ್ಷ್ಮ ಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊಎನ್ನೆಫಲೈಟಿಸ್ ಎನ್ನುವ ಅಪರೂಪದ ಗಂಭೀರ ಮಾರಣಾಂತಿಕ ಖಾಯಿಲೆಯನ್ನು ಉಂಟುಮಾಡುತ್ತದೆ.
ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್‌ಗಳನ್ನು ಬಳಸಿ ಅಥವಾ ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿದು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ.
ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ, ತೀವು ತಲೆನೋವು, ವಾಕರಿಕೆ/ವಾಂತಿ, ಕುತ್ತಿಗೆ ಬಿಗಿತ, ಗೊಂದಲ/ ಮಾನಸಿಕ ಸ್ಥಿತಿಗಳಲ್ಲಿ ಬದಲಾವಣೆಗಳು ಹಾಗೂ ವ್ಯಕ್ತಿಯ ವರ್ತನೆಯಲ್ಲಿ ಅಸ್ವಸ್ಥತೆ ಲಕ್ಷಣಗಳು ಕಾಣಿಸಿಕೊಂಡಲ್ಲಿ ನಿರ್ಲಕ್ಷಿಸದೇ ತುರ್ತು ಆರೈಕೆಯನ್ನು ಪಡೆಯಲು ಹತ್ತಿರದ ಸರ್ಕಾರಿ ಆಸ್ಪತ್ರೆಯ ವೈದ್ಯರನ್ನು ಸಂಪರ್ಕಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.