ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಜೊತೆ ಮಂಜೇಶ್ವರ ಶಾಸಕರ ಸಂಬಂಧವೇನು? – ಬಿಜೆಪಿ ತನಿಖೆಗೆ ಆಗ್ರಹ

ಪೈವಳಿಕೆ: ವಿದೇಶಿ ಕರೆನ್ಸಿ ಕಳ್ಳಸಾಗಣೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಕೊಲೆ ಪ್ರಕರಣದಲ್ಲೂ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ರಾಯಿಸ್ ಎಂಬಾತ ಪ್ರಸ್ತುತ ಗಲ್ಫ್ ರಾಷ್ಟ್ರವೊಂದರಲ್ಲಿ ತಲೆಮರೆಸಿಕೊಂಡಿದ್ದಾನೆ. ಈತನೊಂದಿಗೆ ಮಂಜೇಶ್ವರ ಶಾಸಕರಿಗೆ ವಿದೇಶದಲ್ಲಿ ಯಾವ ರೀತಿಯ ಸಂಬಂಧವಿದೆ ಎಂಬುದನ್ನು ಶಾಸಕರು ಸ್ಪಷ್ಟಪಡಿಸಬೇಕೆಂದು ಬಿಜೆಪಿ ಮಂಜೇಶ್ವರ ಮಂಡಲ ಸಮಿತಿ ಅಧ್ಯಕ್ಷ ಆದರ್ಶ ಬಿ.ಎಂ. ಆಗ್ರಹಿಸಿದ್ದಾರೆ.

ಪೈವಳಿಕೆಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ನಡೆದ ಪ್ರತಿಭಟನೆಗಳ ಬಳಿಕ ಮಂಜೇಶ್ವರ ಶಾಸಕರು ವಿಧಾನಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದರು. ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದ ಶಾಸಕರಿಗೆ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಇತ್ತು. ಹಾಗಿದ್ದರೂ ಇದೀಗ ಆರೋಪಿಯೊಂದಿಗಿನ ಸಂಬಂಧದ ಬಗ್ಗೆ ಸ್ಪಷ್ಟನೆ ನೀಡಬೇಕಾದ ಅಗತ್ಯವಿದೆ. ಅಂದು ವಿಧಾನಸಭೆಯಲ್ಲಿ ಪ್ರಕರಣವನ್ನು ಪ್ರಸ್ತಾಪಿಸಿದ್ದು ಕೇವಲ ನಾಟಕವೇ ಎಂದು ಬಿಜೆಪಿ ಪ್ರಶ್ನಿಸಿದೆ.

ಶಾಸಕರು ಪ್ರತಿ ತಿಂಗಳು ವಿದೇಶ ಪ್ರವಾಸ ಕೈಗೊಳ್ಳುತ್ತಿರುವುದರ ಬಗ್ಗೆಯೂ ಬಿಜೆಪಿ ಅನುಮಾನ ವ್ಯಕ್ತಪಡಿಸಿದೆ. ಈ ಪ್ರವಾಸಗಳ ಉದ್ದೇಶವೇನು ಎಂಬ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದೆ.

ಮಂಜೇಶ್ವರ ಕ್ಷೇತ್ರದ ಅಭಿವೃದ್ಧಿಗೆ ದೂರದೃಷ್ಟಿಯ ಯೋಜನೆಗಳನ್ನು ರೂಪಿಸುವ ಬದಲು, ವಿದೇಶ ಪ್ರವಾಸಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧಿಗಾಗಿ ವಿಕಸಿತ ಮಂಜೇಶ್ವರದ ಯೋಜನೆಗಳನ್ನು ರೂಪಿಸಲು ಸಮಯವಿಲ್ಲದ ಶಾಸಕರಿಗೆ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಭೇಟಿಯಾಗಲು ಸಮಯವಿದೆ ಎಂದು ಬಿಜೆಪಿ ಟೀಕಿಸಿದೆ.

ಈ ಎಲ್ಲ ವಿಚಾರಗಳ ಕುರಿತು ಸೂಕ್ತ ಹಾಗೂ ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕೆಂದು ಬಿಜೆಪಿ ಮಂಜೇಶ್ವರ ಮಂಡಲ ಸಮಿತಿ ಆಗ್ರಹಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!