ಕಳಿಯೂರಿನ ಕೃಷಿ ತೋಟದ ಕೆರೆಯಲ್ಲಿ ಕೊಳೆತ ಶವ ಪತ್ತೆ: ಸಾವಿನ ಸುತ್ತ ನಿಗೂಢತೆ

ಮಂಜೇಶ್ವರ: ವರ್ಕಾಡಿಯ ಕಳಿಯೂರು ಅರಂತೋಡಿಯಲ್ಲಿ ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ ಕೃಷಿ ತೋಟದ ಕೆರೆಯಲ್ಲಿ ಸುಮಾರು 45 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆಯಾಗಿದೆ.

ಕಳಿಯೂರು ಅರಂತೋಡಿಯ ತಿಮ್ಮಪ್ಪ ಭಟ್ ಅವರಿಗೆ ಸೇರಿದ ಕೃಷಿ ತೋಟದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ವ್ಯಕ್ತಿ ಕೆಲ ದಿನಗಳ ಹಿಂದೆಯೇ ಕೆರೆಗೆ ಬಿದ್ದಿರಬಹುದೆಂದು ಶಂಕಿಸಲಾಗಿದೆ. ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು, ಸಾವನ್ನಪ್ಪಿ ಹಲವು ದಿನಗಳು ಕಳೆದಿರಬಹುದು ಎಂದು ಅಂದಾಜಿಸಲಾಗಿದೆ.

ಶುಕ್ರವಾರ ಸಂಜೆ ಕೆರೆಯ ಸುತ್ತಮುತ್ತ ದುರ್ವಾಸನೆ ಹರಡಿದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದಾಗ ಮೃತದೇಹ ಕಂಡುಬಂದಿದೆ. ತಕ್ಷಣ ಮಂಜೇಶ್ವರ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಅಗ್ನಿಶಾಮಕ ದಳದ ಸಹಾಯದಿಂದ ಕೆರೆಯಿಂದ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.

ಬಳಿಕ ಮೃತದೇಹವನ್ನು ಮಂಗಲ್ಪಾಡಿ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಅನ್ಯರಾಜ್ಯದ ಕಾರ್ಮಿಕನಾಗಿರಬಹುದೆಂದು ಶಂಕಿಸಲಾಗಿದೆ.

ಘಟನೆಗೆ ಸಂಬಂಧಿಸಿ ಮಂಜೇಶ್ವರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!