ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ದಾಖಲಾಗಿರುವ ದೂರಿನ ವಿಚಾರವಾಗಿ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಪೊಲೀಸರಿಂದ ವರದಿ ಕೇಳಿದೆ. 1983ರ ಏಪ್ರಿಲ್ನಲ್ಲಿ ಭಾರತೀಯ ಪೌರತ್ವ ಪಡೆಯುವ ಮೊದಲೇ ಸೋನಿಯಾ ಗಾಂಧಿ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿತ್ತು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈ ದೂರು ಸಲ್ಲಿಸಲಾಗಿದೆ.

2025ರ ಆಗಸ್ಟ್ 24ರಂದು ವಕೀಲ ವಿಕಾಸ್ ತ್ರಿಪಾಠಿ ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ, ಪ್ರಕರಣದಲ್ಲಿ ದೆಹಲಿ ಪೊಲೀಸರು ಈವರೆಗೆ ಕೈಗೊಂಡಿರುವ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿದೆ.

ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವಿನೋದ್ ಜೋಶಿ ಅವರು ಈ ನಿರ್ದೇಶನ ನೀಡಿದ್ದಾರೆ. ಪ್ರಕರಣದ ಮುಂದಿನ ವಿಚಾರಣೆಯನ್ನು ನವೆಂಬರ್ 28ಕ್ಕೆ ನಿಗದಿಪಡಿಸಲಾಗಿದೆ.

1980, 1981 ಮತ್ತು 1983ನೇ ಸಾಲಿನ ಮತದಾರರ ಪಟ್ಟಿಗಳ ಪ್ರತಿಗಳನ್ನೂ ನ್ಯಾಯಾಲಯದ ಮುಂದೆ ಸಲ್ಲಿಸಲಾಗಿದೆ. ಭಾರತೀಯ ಪೌರತ್ವ ಪಡೆಯುವ ಮೊದಲೇ ಸೋನಿಯಾ ಗಾಂಧಿ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿತ್ತೇ ಎಂಬ ಆರೋಪದ ಸತ್ಯಾಸತ್ಯತೆಯನ್ನು ಪರಿಶೀಲಿಸುವಂತೆ ದೂರಿನಲ್ಲಿ ಕೋರಲಾಗಿದೆ.

ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಕೈಗೊಂಡಿರುವ ಕ್ರಮಗಳ ಬಗ್ಗೆ ನ್ಯಾಯಾಲಯದ ವರದಿ ಕೋರಿಕೆ ರಾಜಕೀಯ ವಲಯದಲ್ಲೂ ಗಮನ ಸೆಳೆದಿದೆ.

